ಇತ್ತೀಚಿನ ಸುದ್ದಿ
ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ ಗಂಭೀರ
15/06/2026, 20:08
ಮೈಸೂರು(reporterkarnataka.com): ಸಾಂಸ್ಕೃತಿಕ ನಗರಿ ಮೈಸೂರಿನ ರಿಂಗ್ ರಸ್ತೆ ಸಮೀಪದ ಪಬ್ ಒಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಇಬ್ಬರು ಈ ಘಟನೆಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಅಲ್ಲದೇ, ಈ ಅವಗಢದಲ್ಲಿ ಏಳು ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೈಸೂರಿನ ದಟ್ಟಗಳ್ಳಿ 4ನೇ ಹಂತದ ಬಳಿ ಇರುವ ಪ್ರಸಿದ್ಧ ‘ಫಾಕ್ಸ್ ಜೆನ್ ಪಬ್’ನಲ್ಲಿ ಈ ಆಕಸ್ಮಿಕ ದುರಂತ ನಡೆದಿದೆ. ಪಬ್‌ನಲ್ಲಿ ಇದ್ದಕ್ಕಿದ್ದಂತೆ ಕಾಣಿಸಿಕೊಂಡ ಬೆಂಕಿ, ಕ್ಷಣಾರ್ಧದಲ್ಲೇ ಇಡೀ ಕಟ್ಟಡವನ್ನು ಆವರಿಸಿಕೊಂಡಿದೆ. ಬೆಂಕಿಯ ಜ್ವಾಲೆ ಎಷ್ಟೊಂದು ತೀವ್ರವಾಗಿತ್ತೆಂದರೆ ಇಡೀ ಪಬ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.
*ಬೆಂಕಿಯ ಕೆನ್ನಾಲಿಗೆಗೆ ಇಬ್ಬರು ಬಲಿ:*
ಈ ಭೀಕರ ದುರಂತದಲ್ಲಿ ಪಬ್ ಒಳಗಿದ್ದ ಸಾಹೀನ್ ಮತ್ತು ಪ್ರಕಾಶ್ ಎಂಬ ಇಬ್ಬರು ಹೊರಬರಲಾರದೆ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸಜೀವ ದಹನಗೊಂಡಿದ್ದಾರೆ ಎಂದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ ಹಾಗೂ ಗಾಯಾಳುಗಳನ್ನು ರಕ್ಷಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ. ಪಬ್‌ನಲ್ಲಿ ಏಕಾಏಕಿ ಶಾರ್ಟ್ ಸರ್ಕ್ಯೂಟ್ ಅಥವಾ ಇನ್ಯಾವುದೇ ಕಾರಣದಿಂದ ಬೆಂಕಿ ಕಾಣಿಸಿಕೊಂಡಿತೇ ಎಂಬ ನಿಖರ ಕಾರಣ ಇನ್ನು ತನಿಖೆಯಿಂದ ಹೊರಬರಬೇಕಿದೆ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.













