ಇತ್ತೀಚಿನ ಸುದ್ದಿ
ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ: ವಕೀಲ ರಾಜೇಶ್ ಭಟ್ 2 ತಿಂಗಳ ಬಳಿಕ ಕೋರ್ಟ್ ಗೆ ಶರಣು
20/12/2021, 23:03
ಮಂಗಳೂರು(reporterkarnataka.com): ಇಂಟರ್ನ್‌ಶಿಪ್ ಗೆ ಆಗಮಿಸಿದ ಕಾನೂನು ವಿದ್ಯಾರ್ಥಿನಿಗೆ ತನ್ನ ಕಚೇರಿಯಲ್ಲೇ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 2 ತಿಂಗಳಿನಿಂದ ತಲೆಮರೆಸಿಕೊಂಡಿರುವ ವಕೀಲ ಕೆ.ಎಸ್.ಎನ್. ರಾಜೇಶ್ ಭಟ್ ಕೊನೆಗೂ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.
ಇಂದು ಮಧ್ಯಾಹ್ನ 3ನೇ ಜೆಎಂ ಎಫ್ ನ್ಯಾಯಾಲಯದ ಮುಂದೆ ಆರೋಪಿ ವಕೀಲರು ಹಾಜರಾಗುವ ಮೂಲಕ ಅಚ್ಚರಿಗೆ ಕಾರಣರಾದರು. ನಂತರ ಪೊಲೀಸರು ಅವರನ್ನು ವಶಕ್ಕೆ ತೆಗೆದುಕೊಂಡರು.
ವಕೀಲ ರಾಜೇಶ್ ಭಟ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ರಾಜ್ಯ ಹೈಕೋರ್ಟ್ ಇತ್ತೀಚೆಗೆ ತಿರಸ್ಕರಿಸಿತ್ತು. ಈ ಹಿನ್ನೆಲೆಯಲ್ಲಿ ಶರಣಾಗತಿ ಅನಿವಾರ್ಯವಾಗಿತ್ತು.
ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಆರೋಪಿ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಲಾಗಿತ್ತು. ಬ್ಯಾಂಕ್ ಖಾತೆಯನ್ನು ಕೂಡ ಸ್ಥಗಿತಗೊಳಿಸಲಾಗಿತ್ತು ಆರೋಪಿಗೆ ಸಹಕಾರ ನೀಡಿದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿತ್ತು. ಅವರ ಪತ್ನಿಯನ್ನೂ ಬಂಧಿಸಿ ಬಿಡುಗಡೆ ಮಾಡಲಾಗಿತ್ತು.
ಪ್ರಕರಣ ಗಂಭೀರ ಸ್ವರೂಪದ್ದು ಆಗಿರುವುದರಿಂದ ಆರೋಪಿಗೆ ನಿರೀಕ್ಷಣಾ ಜಾಮೀನು ನೀಡಬಾರದು ಎಂದು ಜಿಲ್ಲಾ ನ್ಯಾಯಾಲಯಕ್ಕೆ ಮನವಿ ಮಾಡಲಾಗಿತ್ತು. 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ರಾಜೇಶ್ ಭಟ್ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿತ್ತು. ಆ ಬಳಿಕ
ಆರೋಪಿ ಪರ ವಕೀಲರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅಲ್ಲಿಯೂ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿತ್ತು.
ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ರಾಜೇಶ್ ಭಟ್ ವಿರುದ್ಧ ನಗರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.