ಇತ್ತೀಚಿನ ಸುದ್ದಿ
ಸಚಿವ ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಉಡುಪಿಯಲ್ಲಿ ಆತ್ಮಹತ್ಯೆ
12/04/2022, 13:51
ಉಡುಪಿ(reporterkarnataka.com): ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರು ಉಡುಪಿಯ ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಿಜೆಪಿ ಕಾರ್ಯಕರ್ತರೂ ಆಗಿರುವ ಸಂತೋಷ್ ಪಾಟೀಲ್ ಅವರು ಈಶ್ವರಪ್ಪ ಅವರ ವಿರುದ್ಧ ಕಮಿಷನ್ ಆರೋಪ ಮಾಡಿ ಪ್ರಧಾನಿಗೆ ಪತ್ರ ಬರೆದಿದ್ದರು. ಸಂತೋಷ್ ಪಾಟೀಲ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಈಶ್ವರಪ್ಪ ಎಚ್ಚರಿಕೆ ನೀಡಿದ್ದರು. ಈ ಮಧ್ಯೆ ಸಂತೋಷ್ ಪಾಟೀಲ್ ಕುಟುಂಬ ನಾಪತ್ತೆಯಾಗಿತ್ತು. ಸೋಮವಾರ ಅವರು ಸಾಮಾಜಿಕ ಜಾಲತಾಣಗಳ ಮೂಲಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದರು. ಸಂತೋಷ್ ಪಾಟೀಲ್ ಅವರ ಮೊಬೈಲ್ ಫೋನ್ ರಿಂಗ್ ಆಗುತ್ತಿದ್ದರೂ ರಿಸೀವ್ ಮಾಡುತ್ತಿರಲಿಲ್ಲ. ಮೊಬೈಲ್ ಲೊಕೇಶನ್ ಉಡುಪಿಯನ್ನು ತೋರಿಸುತ್ತಿತ್ತು. ಇದೇ ಜಾಡು ಹಿಡಿದು ಪೊಲೀಸರು ತನಿಖೆ ಆರಂಭಿಸಿದ್ದರು. ಇದೀಗ ಸಂತೋಷ್ ಪಾಟೀಲ್ ಅವರು ಉಡುಪಿಯ ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ. ತನ್ನ ಸಾವಿಗೆ ಸಚಿವ ಈಶ್ವರಪ್ಪ ಅವರೇ ಕಾರಣ. ಅವರಿಗೆ ಶಿಕ್ಷೆಯಾಗಬೇಕು. ತನ್ನ ಹೆಂಡತಿ- ಮಕ್ಕಳಿಗೆ ಪ್ರಧಾನಿ, ಮುಖ್ಯಮಂತ್ರಿ ಹಾಗೂ ಯಡಿಯೂರಪ್ಪ ಅವರು ವ್ಯವಸ್ಥೆ ಮಾಡಿಕೊಡಬೇಕಾಗಿ ಡೆತ್ ನೋಟ್ ನಲ್ಲಿ ಬರೆದಿದ್ದಾರೆ ಎಂದು ತಿಳಿದು ಬಂದಿದೆ.