ಇತ್ತೀಚಿನ ಸುದ್ದಿ
ಕರಾವಳಿ ಸಹಿತ ರಾಜ್ಯದಲ್ಲಿ ಮತ್ತೆ 4 ದಿನ ಭಾರೀ ಮಳೆ: 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
11/09/2022, 22:42
ಬೆಂಗಳೂರು(reporterkarnataka.com):ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ 4 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಘೋಷಿಸಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಬೀದರ್, ರಾಯಚೂರು ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದ್ದು, ಈ 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ.
ಬೆಂಗಳೂರಲ್ಲಿ ಮಳೆ ಆರ್ಭಟ ಕಡಿಮೆಯಾಗಲಿದ್ದು, ಪ್ರವಾಹ ಪರಿಸ್ಥಿತಿ ಸುಧಾರಿಸಲಿದೆ. ಜೊತೆಗೆ ಮಲೆನಾಡು ಭಾಗದಲ್ಲಿ ಮಳೆ ಮತ್ತೆರಡು ದಿನ ಸುರಿಯುವ ಸಾಧ್ಯತೆ ಇದ್ದು, ಉತ್ತರ ಒಳನಾಡಲ್ಲಿ ಮಳೆಯಾಗಲಿದೆ. ಇನ್ನು ರಾಜ್ಯದಲ್ಲಷ್ಟೇ ಅಲ್ಲದೆ ಮಹಾರಾಷ್ಟ್ರ, ಗೋವಾ, ಕೇರಳ, ಆಂಧ್ರಪ್ರದೇಶ, ಒಡಿಶಾ, ತೆಲಂಗಾಣದಲ್ಲೂ ಭಾರೀ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.