ಇತ್ತೀಚಿನ ಸುದ್ದಿ
ಜನರ ಸಮಸ್ಯೆಗಳಿಗೆ ಹಂತ ಹಂತವಾಗಿ ಪರಿಹಾರ: ಜನತಾ ದರ್ಶನ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
25/09/2023, 17:03
ಉಡುಪಿ(reporterkarnataka.com): ಜನತಾ ದರ್ಶನದಂತ ಕಾರ್ಯಕ್ರಮ ಜನ ಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಲು ಉತ್ತಮ ವೇದಿಕೆಯಾಗಲಿದೆ.
ಹಂತ ಹಂತವಾಗಿ ಜನರ ಸಮಸ್ಯೆಗಳಿಗೆ ಪರಿಹಾರ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ಉಡುಪಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ವತಿಯಿಂದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಸೋಮವಾರ ನಡೆದ ‘ಜನತಾ ದರ್ಶನ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆದೇಶದ ಮೇರೆಗೆ ಜಿಲ್ಲಾ ಕೇಂದ್ರಗಳಲ್ಲಿ ಇಂದು ಜನತಾ ದರ್ಶನ ಕಾರ್ಯ ನಡೆಯುತ್ತಿದ್ದು, ಸಾರ್ವಜನಿಕರು ಪದೇ ಪದೇ ಸಣ್ಣ ಪುಟ್ಟ ಕೆಲಸಗಳಿಗೂ ಸರ್ಕಾರಿ ಕಚೇರಿಗಳಿಗೆ, ಶಾಸಕರ, ಜಿಲ್ಲಾ ಮಂತ್ರಿಗಳ, ಮುಖ್ಯಮಂತ್ರಿಗಳ ಬಳಿಗೆ ಅಲೆಯುವುದನ್ನು ತಪ್ಪಿಸುವುದೇ ಇದರ ಮೂಲ ಉದ್ದೇಶ ಎಂದರು.
ಆರೋಗ್ಯ, ಕಂದಾಯ, ಅರಣ್ಯ ಇಲಾಖೆಗಳಲ್ಲಿ ಸಾಕಷ್ಟು ಸಮಸ್ಯೆಗಳು ಕಂಡುಬರುತ್ತಿದ್ದು, ಸಾಧ್ಯವಾದಷ್ಟು ಮಟ್ಟಿಗೆ ಸ್ಥಳದಲ್ಲೇ ಸಮಸ್ಯೆಗಳಿಗೆ ಪರಿಹಾರ ಸೂಚಿಸಲಾಗುತ್ತದೆ ಎಂದು ಅವರು ನುಡಿದರು.
ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಇಡಿ ರಾಜ್ಯದಾದ್ಯಂತ ಏಕ ಕಾಲಕ್ಕೆ ಜನತಾ ದರ್ಶನ ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಯಿತು.
ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್, ಜಿಲ್ಲಾ ಪಂಚಾಯತಿ ಸಿಇಒ ಡಾ.ಪ್ರಸನ್ನ,. ಎಚ್, ಉಪವಿಭಾಗಧಿಕಾರಿ ರಶ್ಮಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.