ಇತ್ತೀಚಿನ ಸುದ್ದಿ
ಮಂಗಳೂರು ದಸರಾ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಾಳೆ ಕುದ್ರೋಳಿ ಕ್ಷೇತ್ರಕ್ಕೆ ಭೇಟಿ
22/10/2023, 18:35

ಮಂಗಳೂರು(reporterkarnataka.com): ಕಡಲನಗರಿ ಮಂಗಳೂರಿನ ಪ್ರತಿಷ್ಠಿತ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ 34 ನೇ ವರ್ಷದ ನವರಾತ್ರಿ ಮಹೋತ್ಸವ ಈಗಾಗಲೇ ಅಕ್ಟೋಬರ್ 15ರಂದು ಶ್ರೀಗಣೇಶ, ನವದುರ್ಗೆ ಮತ್ತು ಶಾರದಾ ಮಾತೆಯ ಮೂರ್ತಿಯನ್ನು ಪ್ರತಿಷ್ಠಾಪನೆಗೊಳಿಸುವ ಮೂಲಕ ವಿಧ್ಯುಕ್ತವಾಗಿ ಆರಂಭಗೊಂಡಿದ್ದು, ನಾಳೆ(ಅ.23)
ದಸರಾ ಮಹೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪಾಲ್ಗೊಳ್ಳಲಿದ್ದಾರೆ.
ಮಂಗಳೂರು ದಸರಾ ಮಹೋತ್ಸವ ಕ್ಷೇತ್ರದ ರೂವಾರಿ ಬಿ. ಜನಾರ್ಧನ ಪೂಜಾರಿ ಅವರ ಮಾರ್ಗದರ್ಶನದಲ್ಲಿ 9 ದಿನಗಳ ಕಾಲ ವಿಜೃಂಭಣೆಯಿಂದ ನಡೆಯಲಿದೆ. ಅ.23ರಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದಸರಾದ ಕಾರ್ಯಕ್ರಮದ ಉದ್ಘಾಟನೆ ನಡೆಸಲಿದ್ದಾರೆ. ಕೇಂದ್ರ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ, ದೇವಳ ಆಡಳಿತ ಮಂಡಳಿಯ ಅಧ್ಯಕ್ಷ ಸಾಯಿರಾಂ, ಉಪಾಧ್ಯಕ್ಷೆ ಉರ್ಮಿಳಾ ರಮೇಶ್, ಪ್ರಧಾನ ಕಾರ್ಯದರ್ಶಿ ಮಾಧವ ಸುವರ್ಣ, ಕೋಶಾಧಿಕಾರಿ ಪದ್ಮರಾಜ್ ಆರ್. ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿರುವರು.ನವರಾತ್ರಿ ಮಹೋತ್ಸವ ಹಾಗೂ ದಸರಾ ಮಹೋತ್ಸವವು ಅ.25 ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಅ. 24ರಂದು 4 ಗಂಟೆಗೆ ಮಂಗಳೂರು ದಸರಾ ಮೆರವಣಿಗೆ ಮಾಜಿ ಸಚಿವ ಬಿ. ಜನಾರ್ಧನ ಪೂಜಾರಿ ಅವರ ಮಾರ್ಗದರ್ಶನದಲ್ಲಿ ಮಂಗಳೂರು ನಗರದ ರಾಜ ರಸ್ತೆಯಲ್ಲಿ ಸಾಗಿ ಕ್ಷೇತ್ರದ ಪುಷ್ಕರಿಣಿಯಲ್ಲಿ ಮೂರ್ತಿ ವಿಸರ್ಜನೆ ನಡೆಯಲಿದೆ.