ಇತ್ತೀಚಿನ ಸುದ್ದಿ
ವಿಧಾನಸಭೆ ಚಳಿಗಾಲದ ಅಧಿವೇಶನ ದಿನಾಂಕ ಶೀಘ್ರದಲ್ಲೇ ಪ್ರಕಟ: ಸ್ಪೀಕರ್ ಯು.ಟಿ.ಖಾದರ್
08/11/2023, 20:24
ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು
info.reporterkarnataka@gmail.com
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ನಲ್ಲಿ ಚಳಿಗಾಲದ ಅಧಿವೇಶನ ನಡೆಸಲು ಸಿದ್ಧತೆ ನಡೆಸಲಾಗುತ್ತಿದ್ದು, ಅಧಿವೇಶನದ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಸ್ಪೀಕರ್ ಯು.ಟಿ.ಖಾದರ್ ಅವರು ಹೇಳಿದರು.
ವಿಧಾನಮಂಡಲ ಚಳಿಗಾಲದ ಅಧಿವೇಶನ ಸಂಬಂಧ ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಕೈಗೊಂಡ ಸಿದ್ಧತೆಯನ್ನು ಮಂಗಳವಾರ ಪರಿಶೀಲಿಸಿದ ನಂತರ ಸ್ಪೀಕರ್ ಯು.ಟಿ. ಖಾದರ್ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಶಿವಮೊಗ್ಗದಲ್ಲಿ
ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಡಿಸೆಂಬರ್ನಲ್ಲಿ ಅಧಿವೇಶನ ನಡೆಯುವುದು ಖಚಿತ. ಅದಕ್ಕಾಗಿಯೇ ನಾವು ಇಲ್ಲಿಗೆ ಬಂದು ಪರಿಶೀಲನೆ ನಡೆಸಿ, ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇವೆ. ಅಧಿವೇಶನಕ್ಕೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ಈ ಬಾರಿಯ ಅಧಿವೇಶನ ಮಾದರಿಯಾಗಲಿದೆ ಎಂಬ ಭರವಸೆಯಿದೆ. ಅಧಿವೇಶನಕ್ಕೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲು 10 ಸಮಿತಿಗಳನ್ನು ರಚಿಸುವಂತೆ ಜಿಲ್ಲಾಧಿಕಾರಿಗೆ ತಿಳಿಸಲಾಗಿದೆ. ವಿಧಾನಸಭೆ ಮತ್ತು ಪರಿಷತ್ ಸದಸ್ಯರಿಗೂ ಸೌಲಭ್ಯ ಕಲ್ಪಿಸಲು ಸೂಚನೆ ನೀಡಲಾಗಿದೆ’ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದರು.