ಇತ್ತೀಚಿನ ಸುದ್ದಿ
ದಿಲ್ಲಿಯಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡರಿಂದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಭೇಟಿ: ರಾಜಕೀಯ ವಲಯದಲ್ಲಿ ಮತ್ತೆ ತೀವ್ರ ಸಂಚಲನ
15/12/2023, 23:00
ಹೊಸದಿಲ್ಲಿ(reporterkarnataka.com): ಮುಂಬರುವ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ನಡುವೆ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ಹೊಸ ಸಂಚಲನ ಮೂಡಿಸಿದೆ.
ದೇವೇಗೌಡ ಅವರು ಸಂಸತ್ ಭವನದಲ್ಲಿ ಖರ್ಗೆ ಅವರನ್ನು ಭೇಟಿಯಾಗಿ ಒಂದು ತಾಸಿಗೂ ಅಧಿಕ ಕಾಲ ಚರ್ಚೆ ನಡೆಸಿದರು. ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಕುರಿತು ದೇವೇಗೌಡ ಮತ್ತು ಖರ್ಗೆ ಅವರು ಮಾತುಕತೆ ನಡೆಸಿದರು ಎನ್ನಲಾಗಿದೆ.
ಉಭಯ ನಾಯಕರ ಭೇಟಿ ಕುರಿತು ರಾಜ್ಯಸಭಾ ಸದಸ್ಯ ರಾಜೀವ್ ಶುಕ್ಲಾ ಟ್ವೀಟ್ ಮಾಡಿದ್ದಾರೆ.
ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಬಗ್ಗೆ ಈಗಾಗಲೇ ಅಂತಿಮ ಸಹಿ ಬಿದ್ದಿದೆ. ಕರ್ನಾಟಕದಲ್ಲಿ ಕೇವಲ ಸೀಟು ಹಂಚಿಕೆ ಮಾತ್ರ ಬಾಕಿ ಉಳಿದಿದೆ. ದೇವೇಗೌಡ ಅವರ ಪುತ್ರ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಇತ್ತೀಚೆಗೆ ಕಲ್ಲಡ್ಕಕ್ಕೆ ಭೇಟಿ ನೀಡಿದ್ದಾಗ ಆರೆಸ್ಸೆಸ್ ನಾಯಕ ಡಾ. ಪ್ರಭಾಕರ ಭಟ್ ಅವರೆದುರು ಬಿಜೆಪಿ ಸಿದ್ದಾಂತವನ್ನು ಒಪ್ಪಿಕೊಂಡಿರುವುದಾಗಿ ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ. ಈ ಎಲ್ಲ ಬೆಳವಣಿಗೆಯ ನಂತರ ದೇವೇಗೌಡರು ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಅವರನ್ನು ಭೇಟಿಯಾಗಿರುವುದು ಕುತೂಹಲ ಕೆರಳಿಸಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕ ಬಿಜೆಪಿ ಮತ್ತು ಜೆಡಿಎಸ್ ಹೀನಾಯವಾಗಿ ಸೋಲುಂಡ ಪಕ್ಷಗಳು ಲೋಕಸಭೆ ಚುನಾವಣೆಯಲ್ಲಿ ಎಲ್ಲಾ 28 ಸ್ಥಾನಗಳನ್ನು ಗೆದ್ದುಕೊಳ್ಳಲು ಉಭಯ ಪಕ್ಷಗಳು ಮೈತ್ರಿ ಮಾಡಿಕೊಂಡಿವೆ.