ಇತ್ತೀಚಿನ ಸುದ್ದಿ
ಹಕ್ಕುಪತ್ರಗಳ ಸಮಸ್ಯೆಗೆ ಶೀಘ್ರವೇ ಪರಿಹಾರ: ಕುಂದಾಪುರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
17/01/2024, 18:53
ಕುಂದಾಪುರ(reporterkarnataka.com): ಬಾಕಿ ಉಳಿದಿರುವ ಹಕ್ಕುಪತ್ರಗಳ ಸಮಸ್ಯೆಗಳನ್ನು ಶೀಘ್ರವೇ ಪರಿಹರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಹೇಳಿದ್ದಾರೆ.
ಕುಂದಾಪುರ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಬುಧವಾರ ನಡೆದ ಹಕ್ಕುಪತ್ರ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಕುಂದಾಪುರ ತಾಲೂಕಿನಲ್ಲಿ ಸುಮಾರು ಸಾವಿರಕ್ಕೂ ಅಧಿಕ ಜನರಿಗೆ ಹಕ್ಕುಪತ್ರ ಸಿಕ್ಕಿಲ್ಲ. ಮುಂದಿನ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಗೂ ಮುನ್ನ ಸಮಸ್ಯೆಗೆ ಪರಿಹಾರ ನೀಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಸ್ಥಳೀಯ ಶಾಸಕರ ನೇತೃತ್ವದಲ್ಲಿ ಪಕ್ಷಾತೀತವಾಗಿ ಗ್ರಾಮ ಪಂಚಾಯತಿ ಮಟ್ಟದಲ್ಲೆ ಹಕ್ಕು ಪತ್ರಗಳ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದರು.
ಜನಪ್ರತಿನಿಧಿಗಳಿಗೆ ಅಧಿಕಾರ ಮುಖ್ಯ ಅಲ್ಲ, ಬಡವರ ಸಮಸ್ಯೆಗಳಿಗೆ ಸ್ಪಂದಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.
*ಉಡುಪಿ ಉಸ್ತುವಾರಿ ಸಚಿವೆಯಾಗಿರುವುದು ನನ್ನ ಭಾಗ್ಯ* : ಉಡುಪಿ ಜಿಲ್ಲೆ ತನ್ನದೇ ವೈಶಿಷ್ಟ್ಯಗಳನ್ನು ಹೊಂದಿದೆ. ಇಂಥ ಜಿಲ್ಲೆಗೆ ಉಸ್ತುವಾರಿ ಸಚಿವೆ ಆಗಿರುವುದು ನನ್ನ ಭಾಗ್ಯ ಎಂದರು.
ಸಮಾರಂಭದಲ್ಲಿ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಜಿಲ್ಲಾಧಿಕಾರಿ ವಿದ್ಯಾಕುಮಾರಿ ಉಪಸ್ಥಿತರಿದ್ದರು.