ಇತ್ತೀಚಿನ ಸುದ್ದಿ
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲೇ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ: ಆಸ್ಪತ್ರೆಗೆ ದಾಖಲು
02/04/2024, 22:48

ಮಂಗಳೂರು(reporterkarnataka.com): ಚುನಾವಣಾ ಕರ್ತವ್ಯ ನಿರತ ಸಿಬ್ಬಂದಿಯೊಬ್ಬರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.
ಆತ್ಮಹತ್ಯೆಗೆ ಯತ್ನಿಸಿದ ಸಿಬ್ಬಂದಿಯನ್ನು ಬೆಳ್ತಂಗಡಿ ಕಡಿರುದ್ಯಾವರ ಪಂಚಾಯತ್ ವ್ಯಾಪ್ತಿಯಲ್ಲಿ ಪಿಡಿಒ ಆಗಿ ಕಾರ್ಯನಿರ್ವಹಿಸಿದ್ದ ಶ್ರೀಧರ್ ಹೆಗಡೆ ಎಂದು ತಿಳಿದು ಬಂದಿದೆ. ತಕ್ಷಣ ಅವರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ.
ಶ್ರೀಧರ ಹೆಗಡೆ ಅವರು ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಏಕಗವಾಕ್ಷಿ ವ್ಯವಸ್ಥೆ ತಂಡದ ಸದಸ್ಯರಾಗಿದ್ದಾರೆ. 2019 ರಿಂದ ಬೆಳ್ತಂಗಡಿ ಕಡಿರುದ್ಯಾವರ ಪಂಚಾಯತ್ ವ್ಯಾಪ್ತಿಯಲ್ಲಿ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿದ್ದರು. ನಂತರ ಅವರ ಸ್ಥಾನಕ್ಕೆ ಬೇರೊಬ್ಬರು ವರ್ಗಾವಣೆಗೊಂಡಿದ್ದರು. ಕಳೆದ ಫೆಬ್ರವರಿಯಿಂದ ಶ್ರೀಧರ್ ಸರಿಯಾದ ಸ್ಥಾನ ಸಿಗಲಿಲ್ಲವೆಂದು ಬೇಸರಗೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.
ಶ್ರೀಧರ್ ಅವರ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದ್ದರೂ, ಅವರನ್ನು ತೀವ್ರ ನಿಗಾಕ್ಕಾಗಿ ಐಸಿಯುಗೆ ವರ್ಗಾಯಿಸಲಾಗಿದೆ. ಅವರ ಪತ್ನಿ ಬೆಳ್ತಂಗಡಿಯಲ್ಲಿ ಸ್ಟಾಫ್ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಜಿಲ್ಲಾ ಪಂಚಾಯತ್ ಸಿಇಒ ಡಾ.ಆನಂದ್, ಎಡಿಸಿ ಡಾ.ಸಂತೋಷ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ತಿಮ್ಮಯ್ಯ ಹಾಗೂ ಇತರೆ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.