ಇತ್ತೀಚಿನ ಸುದ್ದಿ
ಕೋಟರಿಂದ ತೆರವಾದ ಸ್ಥಾನದ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕರೆ
05/07/2024, 21:21
ಮಂಗಳೂರು(reporterkarnataka.com): ಕೋಟ ಶ್ರೀನಿವಾಸ ಪೂಜಾರಿಯಿಂದ ತೆರವಾಗುವ ವಿಧಾನ ಪರಿಷತ್ ಸ್ಥಾನಕ್ಕೆ ಶೀಘ್ರದಲ್ಲಿ ಚುನಾವಣೆ ನಡೆಯಲಿದ್ದು, ಉಭಯ ಜಿಲ್ಲೆಯ ನಾಯಕರುಗಳು ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕರೆ ನೀಡಿದ್ದಾರೆ.
ಶುಕ್ರವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕಾಂಗ್ರೆಸ್ ಮುಖಂಡರೊಂದಿಗೆ ಸಭೆ ನಡೆಸಿ ಅವರು ಮಾತನಾಡುತ್ತಿದ್ದರು.
ಸದಸ್ಯದಲ್ಲೇ ಅಭ್ಯರ್ಥಿಯ ಆಯ್ಕೆ ಕುರಿತು ಸಮಿತಿ ಸದಸ್ಯರು ಸೇರಿ ಮಹತ್ವದ ಸಭೆ ನಡೆಸುತ್ತೇವೆ. ನಾಯಕರ ಮತ್ತು ಕಾರ್ಯಕರ್ತರಿಂದ ಅಭಿಪ್ರಾಯ ಸಂಗ್ರಹಿಸುತ್ತೇವೆ. ಈ ಬಗ್ಗೆ ಯೋಚಿಸಿ ಮುಂದಡಿಯಿಡುತ್ತೇವೆ. ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಶತಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು.
ಸಭೆಯಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಶಾಸಕ ಅಶೋಕ್ ಕುಮಾರ್ ರೈ, ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಶಕುಂತಲಾ ಶೆಟ್ಟಿ, ಜೆ.ಆರ್.ಲೋಬೊ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉಡುಪಿ ವಿಧಾನಸಭಾ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್, ಕೆಪಿಸಿಸಿ ಉಪಾಧ್ಯಕ್ಷ ಎಂ.ಎ.ಗಫೂರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಎಂ.ಎಸ್.ಮಹಮ್ಮದ್, ಜಿ.ಎ.ಬಾವ, ಮಿಥುನ್ ರೈ, ರಕ್ಷಿತ್ ಶಿವರಾಂ, ಮುಖಂಡರಾದ ಯು.ಕೆ.ಮೋನು, ಸುರೇಶ್ ಬಳ್ಳಾಲ್, ಶಶಿಧರ್ ಹೆಗ್ಡೆ, ಮೂಡಾ ಅಧ್ಯಕ್ಷ ಸದಾಶಿವ್ ಉಳ್ಳಾಲ್, ರಾಜ್ಯ ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಸೇರಿದಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಜಿಲ್ಲಾ ಮುಂಚೂಣಿ ಘಟಕಾಧ್ಯಕ್ಷರು, ಕೆಪಿಸಿಸಿ ಸದಸ್ಯರು, ಬ್ಲಾಕ್ ಸಂಯೋಜಕರು ಉಪಸ್ಥಿತರಿದ್ದರು.
ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಸ್ವಾಗತಿಸಿ, ವಂದಿಸಿದರು.