ಇತ್ತೀಚಿನ ಸುದ್ದಿ
2024ನೇ ಸಾಲಿನ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರಕಟ: ಪ್ರೊ. ಜಿ.ಬಿ. ಶಿವರಾಜು, ಹೊಸರಿತ್ತಿಯ ಗಾಂಧಿ ಗ್ರಾಮೀಣ ಗುರುಕುಲ ವಸತಿ ಶಾಲೆಗೆ ಗೌರವ
26/09/2024, 22:12

ಬೆಂಗಳೂರು(reporterkarnataka.com): ಕರ್ನಾಟಕ ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮೂಲಕ ಪ್ರತಿವರ್ಷ ನೀಡುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ಪ್ರಸಕ್ತ ಸಾಲಿನಲ್ಲಿ ಹಿರಿಯ ಗಾಂಧಿವಾದಿ ಪ್ರೊ. ಜಿ.ಬಿ. ಶಿವರಾಜು ಹಾಗೂ ಹಾವೇರಿ ಜಿಲ್ಲೆಯ ಹೊಸರಿತ್ತಿ ಗ್ರಾಮದ ಶ್ರೀ ಗುದ್ಲೆಪ್ಪ ಹಳ್ಳಿಕೇರಿ ಸ್ಮಾರಕ ಪ್ರತಿಷ್ಠಾನದ ಗಾಂಧಿ ಗ್ರಾಮೀಣ ಗುರುಕುಲ ವಸತಿ ಶಾಲೆಗಳು ಆಯ್ಕೆಯಾಗಿವೆ ಎಂದು ಇಲಾಖೆಯ ಆಯುಕ್ತರಾದ ಹೇಮಂತ್ ಎಂ.ನಿಂಬಾಳ್ಕರ್ ತಿಳಿಸಿದ್ದಾರೆ.
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸತ್ಯ, ಅಹಿಂಸೆ, ಸ್ವಾವಲಂಬನೆ, ಗ್ರಾಮಸ್ವರಾಜ್, ಅಸ್ಪøಶ್ಯತೆ ನಿವಾರಣೆ, ಆರ್ಥಿಕ ಚಿಂತನೆಗಳು, ಖಾದಿ ಚಟುವಟಿಕೆ, ಜೀವನ ಶಿಕ್ಷಣ ಮತ್ತಿತರ ತತ್ವಾದರ್ಶಗಳನ್ನು ಅಳವಡಿಸಿಕೊಂಡು ಮಹತ್ಸಾಧನೆ ಮಾಡಿದ ಮಹನೀಯರು ಹಾಗೂ ಸಂಘ ಸಂಸ್ಥೆಗಳನ್ನು ಗುರುತಿಸಿ ಗೌರವಿಸಲು ಕರ್ನಾಟಕ ರಾಜ್ಯ ಸರ್ಕಾರವು 2014 ರಲ್ಲಿ ಕರ್ನಾಟಕ ಗಾಂಧೀ ಸೇವಾ ಪ್ರಶಸ್ತಿ ಸ್ಥಾಪಿಸಿ ಆದೇಶ ಹೊರಡಿಸಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಶಸ್ತಿ ಫಲಕ ಹಾಗೂ ರೂ.5 ಲಕ್ಷ ನಗದು ಒಳಗೊಂಡಿರುವ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಯನ್ನು 2014 ರಿಂದ ಪ್ರದಾನ ಮಾಡುತ್ತಾ ಬಂದಿದೆ. 2023 ರ ವರೆಗೆ 8 ವ್ಯಕ್ತಿಗಳು ಹಾಗೂ 2 ಸಂಸ್ಥೆಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. 2024ನೇ ಸಾಲಿನ ಪ್ರಶಸ್ತಿಯು ಪ್ರೊ. ಜಿ.ಬಿ. ಶಿವರಾಜು, ಗೊಟ್ಟಿಕೆರೆ, ತುರುವೇಕೆರೆ ತಾಲ್ಲೂಕು, ತುಮಕೂರು ಜಿಲ್ಲೆ ಇವರಿಗೆ ಮತ್ತು ಹಾವೇರಿ ಜಿಲ್ಲೆಯ ಹೊಸರಿತ್ತಿ ಗ್ರಾಮದ ಶ್ರೀ ಗುದ್ಲೆಪ್ಪ ಹಳ್ಳಿಕೇರಿ ಸ್ಮಾರಕ ಪ್ರತಿಷ್ಠಾನದ ಗಾಂಧಿ ಗ್ರಾಮೀಣ ಗುರುಕುಲ ವಸತಿ ಶಾಲೆ ಸಂಸ್ಥೆಗೆ ವಿಂಗಡಿಸಿ ಪ್ರದಾನ ಮಾಡಲಾಗುತ್ತಿದೆ. ಪ್ರಶಸ್ತಿ ಮೊತ್ತವನ್ನು ತಲಾ ರೂ.2.5 ಲಕ್ಷಗಳಂತೆ ಸಮನಾಗಿ ಪುರಸ್ಕಾರ ನೀಡಿ ಸ್ಮರಣಿಕೆ, ಪ್ರಶಸ್ತಿ ಪತ್ರದೊಂದಿಗೆ ಬರುವ ಅಕ್ಟೋಬರ್ 2 ಗಾಂಧಿ ಜಯಂತಿಯಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಪಿ.ಎನ್. ದೇಸಾಯಿ ಅವರ ಅಧ್ಯಕ್ಷತೆಯಲ್ಲಿ ರಚನೆಯಾದ ಆಯ್ಕೆ ಸಮಿತಿಯಲ್ಲಿ ಹಿರಿಯ ಪತ್ರಕರ್ತ ಸನತ್‍ಕುಮಾರ್ ಬೆಳಗಲಿ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷರಾದ ವೂಡೆ ಪಿ.ಕೃಷ್ಣ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ನಿರ್ದೇಶಕಿ ಡಾ. ಧರಣಿದೇವಿ ಮಾಲಗತ್ತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ. ನಿಂಬಾಳ್ಕರ್ ಅವರು ಸದಸ್ಯರಾಗಿದ್ದರು.
ಪ್ರಶಸ್ತಿ ಪ್ರದಾನ ಸಮಾರಂಭ 2ನೇ ಅಕ್ಟೋಬರ್ 2024 ರಂದು ಸಂಜೆ 4.30 ಗಂಟೆಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾಸೌಧದ ಸುಲೋಚನಾ ಸಭಾಂಗಣದಲ್ಲಿ ಜರುಗಲಿದೆ.