ಇತ್ತೀಚಿನ ಸುದ್ದಿ
ಸರಕಾರ ರೈತರ ಪರವಾಗಿದೆ: ಚನ್ನರಾಯಪಟ್ಟಣ ರೈತ ನಿಯೋಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ
23/12/2024, 16:31
ಬೆಂಗಳೂರು(reporterkarnataka.com): ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಭೆ ನಡೆಸಿದರು.
ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹೋಬಳಿಯಲ್ಲಿ ಕೆಐಎಡಿಬಿ ವತಿಯಿಂದ 13 ಹಳ್ಳಿಗಳ ವ್ಯಾಪ್ತಿಯಲ್ಲಿ 1777 ಎಕ್ರೆ ಜಮೀನು ಭೂಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಲಾಗಿದ್ದು
ಈಗಾಗಲೇ ಮೂರು ಬಾರಿ ಭೂಸ್ವಾಧೀನ ಪ್ರಕ್ರಿಯೆ ನಡೆಸಿರುವುದರಿಂದ ಹೊಸದಾಗಿ ಭೂಸ್ವಾಧೀನ ನಡೆಸಬಾರದು. ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕು ಎನ್ನುವ ರೈತರ ಮನವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿ 430 ಎಕ್ರೆ ಜಮೀನು ಭೂಸ್ವಾಧೀನಕ್ಕೆ ಈಗಾಗಲೇ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಅಂತಿಮ ಅಧಿಸೂಚನೆ ಆಗಿರುವ ಜಮೀನು ವಾಪಾಸು ಪಡೆಯಲು ಸಾಧ್ಯವಿಲ್ಲ.
ಸರ್ಕಾರ ರೈತರ ಪರವಾಗಿದ್ದು ಈ ವಿಷಯದ ಕುರಿತು ಜನಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಅವರು ಭರವಸೆ ನೀಡಿದರು.
ಅಡ್ವೊಕೇಟ್ ಜನರಲ್ ಅವರ ಅಭಿಪ್ರಾಯವನ್ನು ಸಹ ಪಡೆದುಕೊಂಡು ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಸಚಿವರಾದ ಎಂ.ಬಿ.ಪಾಟೀಲ್, ಕೆ.ಎಚ್.ಮುನಿಯಪ್ಪ, ಐದನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಸಿ. ನಾರಾಯಣಸ್ವಾಮಿ, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ರೈತ ಪ್ರತಿನಿಧಿಗಳು ಉಪಸ್ಥಿತರಿದ್ದರು.