ಇತ್ತೀಚಿನ ಸುದ್ದಿ
ಕಾಂತಾರ: ಚಾಪ್ಟರ್ 1 ಸಿನಿಮಾ ತಂಡ ಷರತ್ತು ಉಲ್ಲಂಘಿಸಿದರೆ ಚಿತ್ರೀಕರಣ ಸ್ಥಗಿತ: ಅರಣ್ಯ ಸಚಿವ ಖಂಡ್ರೆ ಎಚ್ಚರಿಕೆ
21/01/2025, 09:37
ಬೆಂಗಳೂರು(reporterkarnataka.com): ಹಾಸನದ ಸಕಲೇಶಪುರ ಬಳಿಯ ಯಸಳೂರು ವಲಯದ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿರುವ ಕಾಂತಾರ: ಚಾಪ್ಟರ್ 1 ಸಿನಿಮಾ ಚಿತ್ರೀಕರಣ ವೇಳೆ
ಷರತ್ತು ಉಲ್ಲಂಘನೆ ಮಾಡಿದ್ದಲ್ಲಿ ಚಿತ್ರೀಕರಣವನ್ನು
ನಿರ್ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ.
ಶನಿವಾರಸಂತೆ ಬಳಿಯ ಹೇರೂರು ಗ್ರಾಮದ ಗವಿಬೆಟ್ಟ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಶೂಟಿಂಗ್ ನಡೆಯುತ್ತಿದೆ. ಸಿನಿಮಾದ ಶೂಟಿಂಗ್ ವೇಳೆ ನಿಯಮ ಉಲ್ಲಂಘನೆ ಮಾಡಿದ ಆರೋಪ ಕೇಳಿ ಬಂದಿದೆ. ಇದಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಸಚಿವ ಈಶ್ವರ ಬಿ. ಖಂಡ್ರೆ ಅವರು, ‘ಕಾಂತಾರ: ಚಾಪ್ಟರ್ 1’ ಚಿತ್ರತಂಡದವರು ಒಂದು ವೇಳೆ ಷರತ್ತು ಉಲ್ಲಂಘನೆ ಮಾಡಿದ್ದರೆ ಚಿತ್ರೀಕರಣವನ್ನು ನಿರ್ಬಂಧಿಸಿ, ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.
ಗವಿಬೆಟ್ಟ ಮತ್ತು ಸುತ್ತಮುತ್ತಲ ಪರಿಭಾವಿತ ಅರಣ್ಯದ ಅಂಚಿನ ಗೋಮಾಳದಲ್ಲಿ 23 ದಿನ ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಚಿತ್ರೀಕರಣ ನಡೆಸಲು ‘ಹೊಂಬಾಳೆ ಫಿಲ್ಮ್ಸ್’ ಸಂಸ್ಥೆಯವರು ಅನುಮತಿ ಕೋರಿದ್ದರು. ಇದಕ್ಕೆ ಹಾಸನ ಉಪ ಅರಣ್ಯ ಸಂರಕ್ಷಣಾಧಿಕಾರಿಯವರು ಷರತ್ತುಬದ್ಧ ಅನುಮತಿ ನೀಡಿದ್ದಾರೆ. ಆದರೆ ಕಾಂತಾರ ಚಿತ್ರತಂಡ ಚಿತ್ರೀಕರಣದ ವೇಳೆ ಸ್ಫೋಟಕ ಬಳಸುತ್ತಿದ್ದು, ಇದರಿಂದ ವನ್ಯಜೀವಿಗಳು ವಿಚಲಿತವಾಗುತ್ತಿವೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿದೆ ಎಂದು ಈಶ್ವರ ಖಂಡ್ರೆ ಹೇಳಿದ್ದಾರೆ