9:02 PM Tuesday23 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

23/09/2025, 20:55

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnata@gmail.com

ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆ ಜಿಲ್ಲಾಸ್ಪತ್ರೆಯಾಗಿ, ಹುದಿಕೇರಿಯ ಪ್ರಾಥಮಿಕ ಆರೋಗ್ಯ ಕೇಂದ್ರ ಸಮುದಾಯ ಆರೋಗ್ಯ ಕೇಂದ್ರವಾಗಿ ಹಾಗೂ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರ ತಾಲ್ಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆ ಹಾಗೂ ಹುದಿಕೇರಿಯ ಪ್ರಾಥಮಿಕ ಆರೋಗ್ಯ ಕೇಂದ್ರ ವೀಕ್ಷಣೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಈ ಬಾರಿ ಬಜೆಟ್ ಸಂದರ್ಭದಲ್ಲಿ ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಬೇಕು ಎಂದು ಪ್ರಕಟಿಸಲಾಗಿತ್ತು. ಹಾಗೆಯೇ ಪೊನ್ನಂಪೇಟೆ ಮತ್ತು ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲ್ಲೂಕು ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲು ಉದ್ದೇಶವಾಗಿತ್ತು. ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲ್ಲೂಕು ಆಸ್ಪತ್ರೆಯನ್ನಾಗಿ ಹಾಗೂ ಹುದಿಕೇರಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತದೆ ಎಂದು ಸಚಿವರು ನುಡಿದರು.


‘ವಿರಾಜಪೇಟೆಯಲ್ಲಿ 400 ಹಾಸಿಗೆ ಆಸ್ಪತ್ರೆ ನಿರ್ಮಿಸುವ ಉದ್ದೇಶವಾಗಿತ್ತು. ಸದ್ಯ 250 ಹಾಸಿಗೆಯ ಆಸ್ಪತ್ರೆ ನಿರ್ಮಿಸಲಾಗುತ್ತಿದ್ದು, ವೈದ್ಯರು ಹಾಗೂ ಶುಶ್ರೂಷಕರು ಸೇರಿದಂತೆ ಸಿಬ್ಬಂದಿಗಳ ವಸತಿ ಗೃಹವನ್ನು ಸಹ ನಿರ್ಮಿಸಲಾಗುತ್ತಿದೆ ಸುಮಾರು 105 ಕೋಟಿ ರೂ. ವೆಚ್ಚದಲ್ಲಿ ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆಯನ್ನು ಜಿಲ್ಲಾಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತದೆ ಎಂದು ದಿನೇಶ್ ಗುಂಡೂರಾವ್ ಅವರು ಮಾಹಿತಿ ನೀಡಿದರು.
ಹುದಿಕೇರಿಯಲ್ಲಿ ಸುಮಾರು 6 ಕೋಟಿ ರೂ. ವೆಚ್ಚದಲ್ಲಿ 30 ಹಾಸಿಗೆಯ ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತದೆ. ಹಾಗೆಯೇ ಕುಶಾಲನಗರದಲ್ಲಿ 40 ಕೋಟಿ ರೂ. ವೆಚ್ಚದಲ್ಲಿ ತಾಲ್ಲೂಕು ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.’
ವಸತಿ ಗೃಹ ನಿರ್ಮಾಣ ಸೇರಿದಂತೆ ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ವಾರ ಟೆಂಡರ್ ಆಹ್ವಾನಿಸಲಾಗುವುದು. ಜೊತೆಗೆ ನವೆಂಬರ್ ಅಥವಾ ಡಿಸೆಂಬರ್ ತಿಂಗಳಲ್ಲಿ ವಿರಾಜಪೇಟೆ, ಹುದಿಕೇರಿ ಮತ್ತು ಕುಶಾಲನಗರ ಆಸ್ಪತ್ರೆ ಮೇಲ್ದರ್ಜೆಗೇರಿಸುವ ಸಂಬಂಧ ಭೂಮಿ ಪೂಜೆ ನೆರವೇರಿಸಲಾಗುವುದು ಎಂದು ಸಚಿವರು ಪ್ರಕಟಿಸಿದರು.
ಸ್ಥಳೀಯ ಶಾಸಕರಾದ ಎ.ಎಸ್.ಪೊನ್ನಣ್ಣ ಅವರ ಪ್ರಯತ್ನದಿಂದ ವಿರಾಜಪೇಟೆ ಕ್ಷೇತ್ರದ ಆಸ್ಪತ್ರೆ ಸೇರಿದಂತೆ ಹೆಚ್ಚಿನ ಅಭಿವೃದ್ಧಿಗೆ ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡುತ್ತಿದೆ. ನಾನು ಸಹ ಇದೇ ಜಿಲ್ಲೆಯವನಾಗಿರುವುದರಿಂದ ಜಿಲ್ಲೆಯ ಅಭಿವೃದ್ಧಿಗೆ ಕೈಜೋಡಿಸಲಾಗುವುದು ಎಂದು ದಿನೇಶ್ ಗುಂಡೂರಾವ್ ಅವರು ಹೇಳಿದರು.
ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು ಪ್ರಜಾಪ್ರಭುತ್ವದಲ್ಲಿ ಯಾವುದೇ ಕೆಲಸ ಮಾಡುವಾಗ ಪರ ವಿರೋಧ ಇದ್ದೇ ಇರುತ್ತದೆ. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಎಲ್ಲಾ ವರ್ಗದ ಜನರಿಗೆ ಸರ್ಕಾರದ ಕಾರ್ಯಕ್ರಮಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ತಲುಪಿಸಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಪ್ರತೀ ಬಡವರಿಗೂ ಮೀಸಲಾತಿ ಕಲ್ಪಿಸಬೇಕು ಎಂಬುದು ಸರ್ಕಾರದ ಆಶಯವಾಗಿದೆ. ಆ ನಿಟ್ಟಿನಲ್ಲಿ ಸರ್ಕಾರದ ವಿಶೇಷ ಸೌಲಭ್ಯಗಳನ್ನು ತಲುಪಿಸುವುದು ಅತೀ ಮುಖ್ಯವಾಗಿದ್ದು, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳಲಾಗುತ್ತದೆ ಎಂದರು.
ಬಡ ಜನರಿಗೆ ಕಾರ್ಯಕ್ರಮಗಳನ್ನು ತಲುಪಿಸುವಲ್ಲಿ ಅಂಕಿ ಅಂಶಗಳು ಅತೀ ಮುಖ್ಯವಾಗಿದ್ದು, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳಲಾಗಿದೆ. ಅದನ್ನು ಬಿಟ್ಟು ಅಪಸ್ವರ ತೆಗೆಯುವುದು ಸರಿಯಲ್ಲ. ಅನುಮಾನ ಇದ್ದಲ್ಲಿ ಮಾಹಿತಿ ನೀಡಬಹುದಾಗಿದೆ. ಅದನ್ನು ಬಿಟ್ಟು ಗೊಂದಲ ನಿರ್ಮಾಣ ಮಾಡುವುದು ಬೇಡ ಎಂದರು.
ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ ಚುನಾವಣಾ ಸಂದರ್ಭದಲ್ಲಿಯೇ ವಿರಾಜಪೇಟೆ ಆಸ್ಪತ್ರೆಯನ್ನು ಜಿಲ್ಲಾಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಬೇಕೆಂದು ಪ್ರಕಟಿಸಲಾಗಿತ್ತು. ಅದರಂತೆ ಈಗ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲಾಗುತ್ತದೆ ಎಂದು ಹೇಳಿದರು.
ಹಾಗೆಯೇ ಹುದಿಕೇರಿಯ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.
ತಾಲ್ಲೂಕು ಆಸ್ಪತ್ರೆಯನ್ನು ಜಿಲ್ಲಾಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಬೇಕು ಎಂದು ಪ್ರತ್ಯೇಕ ಪ್ರಣಾಳಿಕೆಯಲ್ಲಿ ಪ್ರಕಟಿಸಲಾಗಿತ್ತು, ಆ ನಿಟ್ಟಿನಲ್ಲಿ ಮುಖ್ಯಮಂತ್ರಿ ಅವರು ಮತ್ತು ಸಚಿವರು ಸ್ಪಂದಿಸಿದ್ದಾರೆ. ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
ಒಳ್ಳೆಯ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು, ಶೀಘ್ರ ಕಾಮಗಾರಿ ಆರಂಭಿಸಲಾಗುವುದು ಎಂದು ಎ.ಎಸ್.ಪೊನ್ನಣ್ಣ ಹೇಳಿದರು.
ಸಚಿವರಾದ ದಿನೇಶ್ ಗುಂಡೂರಾವ್ ಅವರು ವಿರಾಜಪೇಟೆಯ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ಕ್ಷೇಮ ವಿಚಾರಿಸಿದರು. ತೀವ್ರ ನಿಗಾ ಘಟಕ ಸೇರಿದಂತೆ ವಿವಿಧ ವಿಭಾಗಗಳಿಗೆ ತೆರಳಿ ಪರಿಶೀಲಿಸಿದರು. ಬಡ ಜನರಿಗೆ ಉತ್ತಮ ಆರೋಗ್ಯ ಸೇವೆ ಕಲ್ಪಿಸುವಂತೆ ವೈದ್ಯರಿಗೆ ಸೂಚಿಸಿದರು.
ಎಂಜಿನಿಯರ್ ಗಳ ಜೊತೆ ಜಾಗ ಪರಿಶೀಲಿಸಿದರು. ಬಳಿಕ ಹುದಿಕೇರಿಯಲ್ಲಿ ನಿರ್ಮಾಣವಾಗುವ ಸಮುದಾಯ ಆರೋಗ್ಯ ಕೇಂದ್ರ ಸ್ಥಳ ವೀಕ್ಷಿಸಿದರು. ನಗರದ ಕುಶಾಲನಗರದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ತಾಲ್ಲೂಕು ಆಸ್ಪತ್ರೆಯ ಸ್ಥಳ ವೀಕ್ಷಣೆ ಮಾಡಿದರು. ಬಳಿಕ ಆಲೂರು ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ವೀಕ್ಷಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳಾದ ಡಾ.ಆನಂದ್, ಡಾ.ಸನತ್ ಕುಮಾರ್, ಡಾ.ಮದುಸೂದನ್, ತಾಲ್ಲೂಕು ವೈದ್ಯಾಧಿಕಾರಿಗಳಾದ ಡಾ.ಸಿಂಪಿ, ಡಾ.ಯತೀಶ್ ಕುಮಾರ್, ವಿರಾಜಪೇಟೆ ಪುರಸಭೆ ಅಧ್ಯಕ್ಷರಾದ ಮನೆಯಪಂಡ ದೇಚಮ್ಮ ಕಾಳಪ್ಪ, ಪುರಸಭೆ ಮುಖ್ಯಾಧಿಕಾರಿ ನಾಚಪ್ಪ, ಇತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು