ಇತ್ತೀಚಿನ ಸುದ್ದಿ
Atrocity Against Women | ಮಲ್ಪೆಯಲ್ಲಿ ಮಹಿಳೆಯ ಕಟ್ಟಿ ಹಾಕಿ ಥಳಿಸಿದ ಪ್ರಕರಣ: ಕಠಿಣ ಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ
19/03/2025, 21:20

ಬೆಂಗಳೂರು(reporterkarnataka.com): ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿದ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಅಪರಾಧಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆದೇಶಿಸಿದ್ದಾರೆ.
ಒಬ್ಬ ಮಹಿಳೆಯನ್ನು ಈ ರೀತಿ ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ ಘಟನೆ. ಮಾಹಿತಿ ಬಂದ ತಕ್ಷಣ ಅಧಿಕಾರಿಗಳ ಜೊತೆ ಮಾತನಾಡಿ ಕಠಿಣ ಕ್ರಮಕ್ಕೆ ಸೂಚಿಸಿದ್ದೇನೆ. ಈಗಾಗಲೇ ಮೂವರನ್ನು ಬಂಧಿಸಲಾಗಿದೆ. ಪ್ರಕರಣದ ಹಿಂದೆ ಇನ್ನೂ ಯಾರಿದ್ದಾರೆ ಎಂದು ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳಲು ಸೂಚಿಸಿದ್ದೇನೆ ಎಂದು ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.
ಇಂತಹ ಅನಾಗರೀಕ ವರ್ತನೆ ಸಹಿಸಲಾಗದು. ತಪ್ಪಿತಸ್ಥರ ವಿರುದ್ಧ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ. ಜನರು ಕಾನೂನನ್ನು ಕೈಗೆತ್ತಿಕೊಳ್ಳುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಸಚಿವರು ತಿಳಿಸಿದ್ದಾರೆ.
ಈ ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಲಾಗಿದೆ ಎಂದು ಹೆಬ್ಬಾಳಕರ್ ಹೇಳಿದ್ದಾರೆ.