ಇತ್ತೀಚಿನ ಸುದ್ದಿ
ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ: ರಾಜ್ಯದ ಹಲವೆಡೆ ಇನ್ನೂ 3 ದಿನ ಮಳೆ ಸಾಧ್ಯತೆ
02/05/2022, 11:01
ಬೆಂಗಳೂರು(reporterkarnataka.com):ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದ ಹಲವೆಡೆ ಭಾನುವಾರ ಉತ್ತಮ ಮಳೆಯಾಗಿದ್ದು, ಇನ್ನು ಮುಂದಿನ ಮೂರು ದಿನಗಳ ಕಾಲ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ.
ಮೇ 5ರ ನಂತರ ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವಡೆ ಸಾಧಾರಣ ಮಳೆಯಾದರೆ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲಿ ವ್ಯಾಪಕ ಮಳೆಯಾಗಲಿದೆ.
ಹವಾಮಾನ ತಜ್ಞ ಡಾ.ಶ್ರೀನಿವಾಸ ರೆಡ್ಡಿ ಮಾತನಾಡಿ, ಮೇಲ್ಮೈ ಸುಳಿಗಾಳಿ, ವಿದರ್ಭದಿಂದ ಕರ್ನಾಟಕದವರೆಗೆ ಮೋಡ ಕವಿದ ವಾತಾವರಣ ಹಾಗೂ ತಾಪಮಾನ ಹೆಚ್ಚಳದಿಂದ ರಾಜ್ಯದಲ್ಲಿ ಮಳೆ ಬೀಳುತ್ತಿದೆ. ಮುಂದಿನ 72 ಗಂಟೆ ಸಾಧಾರಣ ಮಳೆಯಾದರೆ . ಮೇ 5ರಿಂದ ಕರಾವಳಿ ಹಾಗೂ ಉತ್ತರ ಒಳನಾಡಿಗಿಂತ ದಕ್ಷಿಣ ಒಳನಾಡಿನಲ್ಲಿ ಹೆಚ್ಚು ಮಳೆ ಬೀಳಲಿದೆ. ಮಳೆ ಬಿದ್ದರೆ ತಾಪಮಾನ ತುಸು ಕಡಿಮೆಯಾಗುತ್ತದೆ. ಆದರೆ, ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಉಷ್ಣಾಂಶ ಯಥಾಸ್ಥಿತಿಯಲ್ಲಿ ಇರಲಿದೆ ಎಂದರು.