ಇತ್ತೀಚಿನ ಸುದ್ದಿ
Bangalore | ಪರಿಶಿಷ್ಟ ಜಾತಿ/ ಪಂಗಡ ದೌರ್ಜನ್ಯ ತಡೆ ಕಾಯ್ದೆ ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಿ: ಮುಖ್ಯಮಂತ್ರಿ ಖಡಕ್ ಸೂಚನೆ
25/08/2025, 17:17

ಬೆಂಗಳೂರು(reporterkarnataka.com):ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದರು.
ವಿಧಾನ ಸೌಧದಲ್ಲಿ ಇಂದು ನಡೆದ ರಾಜ್ಯಮಟ್ಟದ ಜಾಗೃತಿ ಹಾಗೂ ಉಸ್ತುವಾರಿ ಸಮಿತಿಗಳ ಸಭೆಯಲ್ಲಿ ಮುಖ್ಯಮಂತ್ರಿ ಮಾತನಾಡಿದರು.
ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು. ನ್ಯಾಯಾಲಯಗಳಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳ ಕುರಿತು ತೀರ್ಪು ಬಂದರೂ, ತೀರ್ಪು ಜಾರಿಗೆ ಯಾಕೆ ಬಾಕಿ ಇದೆ. ಪ್ರಸ್ತುತ ಸುಳ್ಳು ಜಾತಿ ಪ್ರಮಾಣ ಪತ್ರ ಸಾಬೀತಾಗಿರುವ 170 ಪ್ರಕರಣಗಳಲ್ಲಿದ್ದು, ತಕ್ಷಣ ಕ್ರಮ ಕೈಗೊಳ್ಳಬೇಕು. ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಸರ್ಕಾರದ ಸೌಲಭ್ಯಗಳನ್ನು ಪಡೆದಿರುವುದು ಸಾಬೀತಾದರೆ ಅದನ್ನು ಮರಳಿ ಪಡೆಯಲು ಕ್ರಮ ಕೈಗೊಳ್ಳಬೇಕು. ಈ ಕುರಿತು ಇಲಾಖೆಗಳ ನಡುವೆ ಸಮನ್ವಯತೆ ಅಗತ್ಯವಿದ್ದು, ಸಮಗ್ರ ವರದಿಯನ್ನು ಸಲ್ಲಿಸಲು ಸಿದ್ದರಾಮಯ್ಯ ಸೂಚಿಸಿದರು.
ರಾಜ್ಯದಲ್ಲಿ 33 ಡಿಸಿಆರ್‌ಇ ಪೊಲೀಸ್ ಠಾಣೆಗಳನ್ನು ತೆರೆಯಲಾಗಿದ್ದು, ಇಲ್ಲಿ ಸಿಬ್ಬಂದಿ ಕೊರತೆಯಿದ್ದರೆ ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕು. ಈ ಕುರಿತು ಸರ್ಕಾರಕ್ಕೆ ಸೂಕ್ತ ಪ್ರಸ್ತಾವನೆ ಸಲ್ಲಿಸಬೇಕು. ದೌರ್ಜನ್ಯ ಪ್ರಕರಣಗಳಲ್ಲಿ ಪ್ರತಿ ದೂರು ದಾಖಲಿಸುವ ಪ್ರವೃತ್ತಿ ಹೆಚ್ಚುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಅಂತಹ ಪ್ರಕರಣಗಳಲ್ಲಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ದೂರಿನಲ್ಲಿ ಸತ್ಯಾಂಶವಿದ್ದರೆ ಮಾತ್ರ ಎಫ್‌ಐಆರ್ ದಾಖಲಿಸಬೇಕು ಎಂದು ಸೂಚನೆ ನೀಡಿದರು.
ಸಚಿವರಾದ ಹೆಚ್.ಕೆ.ಪಾಟೀಲ್, ಡಾ.ಹೆಚ್.ಸಿ ಮಹಾದೇವಪ್ಪ, ಕೆ.ಎಚ್.ಮುನಿಯಪ್ಪ, ಆರ್.ಬಿ.ತಿಮ್ಮಾಪುರ್, ಶಾಸಕರಾದ ಎ.ಸಿ.ಶ್ರೀನಿವಾಸ್, ಎಚ್.ವಿ.ವೆಂಕಟೇಶ್, ಸುಧಾಮ್ ದಾಸ್, ಎ.ಆರ್.ಕೃಷ್ಣಮೂರ್ತಿ, ನರೇಂದ್ರ ಸ್ವಾಮಿ, ಡಿ.ತಿಮ್ಮಯ್ಯ, ಭಾಗೀರಥಿ, ಶಾಂತಾರಾಮ್ ಸಿದ್ದಿ, ಬಸವರಾಜ್, ಬಿಎಂ.ನಾಗರಾಜ್, ಎನ್.ಟಿ.ಶ್ರೀನಿವಾಸ್, ಬಸನಗೌಡ ತುರವಿಹಾಳ್, ರಾಜು ವೇಣುಗೋಪಾಲ ನಾಯಕ್, ಡಾ.ಉಮೇಶ್ ಜಾಧವ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.