ಇತ್ತೀಚಿನ ಸುದ್ದಿ
ಬೆಂಗಳೂರು: 22ನೇ ಚಿತ್ರಸಂತೆ ಉದ್ಘಾಟನೆ; ಕಲಾಕೃತಿ ಕೊಂಡು ಕಲಾವಿದರ ಬೆಂಬಲಿಸಲು ಮುಖ್ಯಮಂತ್ರಿ ಕರೆ
05/01/2025, 22:02
ಬೆಂಗಳೂರು(reporterkarnataka.com): ಕಲಾಸಕ್ತರು ಚಿತ್ರಸಂತೆಗೆ ಭೇಟಿ ನೀಡಿ ಕಲಾಕೃತಿಯನ್ನು ಕೊಂಡು ಕಲಾವಿದರಿಗೆ ಬೆಂಬಲ ನೀಡಬೇಕು. ಮನೆಯಲ್ಲಿ ಕಲಾಕೃತಿಯಿದ್ದರೆ ಚಿತ್ರ ಸಂತೆ ಏರ್ಪಾಡು ಮಾಡಿದ್ದಕ್ಕೂ ಸಾರ್ಥಕವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಅವರು ಇಂದು ಬೆಂಗಳೂರಿನ ಕುಮಾರ ಕೃಪಾ ರಸ್ತೆಯಲ್ಲಿ ಚಿತ್ರಕಲಾ ಪರಿಷತ್ತು ಆಯೋಜಿಸಲಾಗಿದ್ದ 22ನೇ ಚಿತ್ರ ಸಂತೆ ಯನ್ನು ಉದ್ಘಾಟನೆ ಮಾಡಿ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಏಳನೇ ಬಾರಿ ಚಿತ್ರಸಂತೆ ಉದ್ಘಾಟಿಸುತ್ತಿದ್ದು, ರಾಜ್ಯದ ಸಂಸ್ಕೃತಿ, ಪರಂಪರೆ, ಸಂಪ್ರದಾಯವನ್ನು ಚಿತ್ರದ ಮೂಲಕ ರಾಜ್ಯ ಮತ್ತು ಜಗತ್ತಿಗೆ ತಿಳಿಸಬೇಕೆಂಬ ಪ್ರಯತ್ನವನ್ನು ಚಿತ್ರ ಕಲಾ ಪರಿಷತ್ತು ಮಾಡುತ್ತಿದೆ ಎಂದು ತಿಳಿಸಿದ ಮುಖ್ಯಮಂತ್ರಿಗಳು ಚಿತ್ರಸಂತೆ ಆಯೋಜಿಸಿದ್ದ ಎಲ್ಲಾ ಪದಾಧಿಕಾರಿಗಳನ್ನು ಅಭಿನಂದಿಸಿದರು.
ಚಿತ್ರಸಂತೆಯಲ್ಲಿ 22 ರಾಜ್ಯಗಳ ಕಲಾವಿದರು ಪಾಲ್ಗೊಳ್ಳುತ್ತಿರುವುದು ಶ್ಲಾಘನೀಯ. ಜಗತ್ತಿನ ಯಾವ ಭಾಗದಲ್ಲಿಯೂ ಚಿತ್ರಸಂತೆ ನಡೆಯುವುದನ್ನು ನಾನು ನೋಡಿಲ್ಲ. ಕರ್ನಾಟಕದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ ಚಿತ್ರನಟ ನಡೆಯುವುದು ಹೆಮ್ಮೆಯ ಸಂಗತಿ ಎಂದರು.
*ಕಲಾವಿದರಿಗೆ ವೇದಿಕೆ:*
ಅನೇಕ ಚಿತ್ರಕಲಾವಿದರಿಗೆ ವೇದಿಕೆಯನ್ನು ಕಲ್ಪಿಸಿ ಅವರ ಪ್ರತಿಭೆಯನ್ನು ಪ್ರದರ್ಶಿಸಿ ಆಸಕ್ತರಿಗೆ ಕೊಳ್ಳುವ ಅವಕಾಶವನ್ನೂ ಚಿತ್ರದಂತೆ ಒದಗಿಸುತ್ತಿದೆ. ಒಂದು ದಿನಕ್ಕೆ ನಾಲ್ಕು ಲಕ್ಷ ಜನರು ಭೇಟಿ ನೀಡುತ್ತಾರೆ. ಬೆಂಗಳೂರಿಗೆ ಇದೊಂದು ಸುವರ್ಣಾವಕಾಶ ಎಂದರು .
*ಚಿತ್ರಸಂತೆ ಮಹಿಳೆಯರಿಗೆ ಸಮರ್ಪಿತ:*
ಈ ಬಾರಿಯ ಚಿತ್ರಸಂತೆಯನ್ನು ಹೆಣ್ಣುಮಕ್ಕಳಿಗೆ ಸಮರ್ಪಣೆ ಮಾಡಿರುವುದು ವಿಶೇಷ. ಹೆಣ್ಣುಮಕ್ಕಳ ಪರವಾಗಿ ಕೆಲಸ ಮಾಡಿದ ಮಹಾತ್ಮಾ ಗಾಂಧಿ, ಅಂಬೇಡ್ಕರ್, ಸಾವಿತ್ರಿಬಾಯಿ ಫುಲೆ, ಫಾತಿಮಾ ಶೇಖ್, ಕಮಲಾ ಬಾಯಿ ಚಟ್ಟೋಪಾಧ್ಯಾಯ, ಯಶೋಧರಮ್ಮ ದಾಸಪ್ಪ, ದತ್ತಮ್ಮ ಮೊದಲಾದವರ ಚಿತ್ರಗಳನ್ನು ಪ್ರದರ್ಶಿಸಿದ್ದಾರೆ.
ಒಬ್ಬ ಪುರುಷನಿಗೆ ಶಿಕ್ಷಣ ನೀಡಿದರೆ ಒಬ್ಬ ವ್ಯಕ್ತಿಗೆ ಶಿಕ್ಷಣ ನೀಡಿದಂತಾಗುತ್ತದೆ .ಒಬ್ಬ ಮಹಿಳೆಗೆ ಶಿಕ್ಷಣ ನೀಡಿದರೆ ಒಂದು ಕುಟುಂಬವೇ ಕಲಿತಂತಾಗುತ್ತದೆ ಎಂದರು.
*ಮಹಿಳಾ ಸಬಲೀಕರಣಕ್ಕಾಗಿ ಶಕ್ತಿ ಹಾಗೂ ಗೃಹಲಕ್ಷ್ಮೀ ಯೋಜನೆ:*
ಹೆಣ್ಣುಮಕ್ಕಳು ಶೋಷಣೆ, ತಾರತಮ್ಯ, ಅನ್ಯಾಯಕ್ಕೆ ಒಳಗಾದವರು. ಅವರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರನ್ನಾಗಿಸಲು ಶಕ್ತಿ ಹಾಗೂ ಗೃಹಲಕ್ಷ್ಮಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ ಎಂದರು.
*ಸಾವಿರ ಪದಗಳಿಗಿಂತಲೂ ಚಿತ್ರವೊಂದು ಪ್ರಭಾವಶಾಲಿ:*
ಸಂವಿಧಾನದ ಪೀಠಿಕೆಯನ್ನು ಕೂಡ ಇಲ್ಲಿ ಪ್ರದರ್ಶಿಸಲಾಗಿದ್ದು, ಸಮಾಜದ ಎಲ್ಲಾ ವರ್ಗದ ಜನರನ್ನೂ ಪ್ರತಿನಿಧಿಸುತ್ತಿದೆ. ಒಂದು ಚಿತ್ರ ಸಾವಿರ ಪದಗಳಿಗಿಂತಲೂ ಪ್ರಭಾವಶಾಲಿಯಾಗಿದೆ. ಚಿತ್ರದ ಮೂಲಕ ಜನಜೀವನ, ಸಂಸ್ಕೃತಿ, ಪರಂಪರೆಯನ್ನು ಬಿಂಬಿಸಬಹುದಾಗಿದೆ. ಚಿತ್ರಕಲಾ ಪರಿಷತ್ತು ಉತ್ತಮ ಕೆಲಸ ಮಾಡುತ್ತಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.