ಇತ್ತೀಚಿನ ಸುದ್ದಿ
ರಾಜ್ಯದ ಹಲವೆಡೆ ಕೋರ್ಟ್ಗಳಿಗೆ ಬಾಂಬ್ ಬೆದರಿಕೆ: ಬಾಂಬ್ ನಿಷ್ಕ್ರಿಯ ದಳ, ಡಾಗ್ ಸ್ಕ್ವಾಡ್ ದೌಡು
16/02/2026, 14:27
ಬೆಂಗಳೂರು(reporterkarnataka.com): ರಾಜ್ಯದಲ್ಲಿ ಬಾಂಬ್ ಬೆದರಿಕೆ ಸಂದೇಶಗಳ ಸರಮಾಲೆ ಮುಂದಿವರಿದಿದ್ದು, ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದ ಕೋರ್ಟ್ ಸೇರಿದಂತೆ ಹಲವು ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ.


ವಕೀಲರು, ಕೋರ್ಟ್ ಸಿಬ್ಬಂದಿಗಳು ಇದರಿಂದ ಆತಂಕಕ್ಕೊಳಗಾಗುವಂತಾಯಿತು. ಸದ್ಯ ಪೊಲೀಸರು, ಶ್ವಾನ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಪರಿಣಾಮವಾಗಿ ಇದೀಗ, ಹುಸಿ ಬಾಂಬ್ ಬೆದರಿಕೆ ಸಂದೇಶ ಕಳುಹಿಸುವವರ ವಿರುದ್ಧ ಕಠಿಣ ಕ್ರಮ ಆಗಬೇಕೆಂಬ ಆಗ್ರಹ ಹೆಚ್ಚಾಗಿದೆ.
ಕರ್ನಾಟಕದಲ್ಲಿ ನ್ಯಾಯಾಂಗ ಸಂಸ್ಥೆಗಳನ್ನೇ ಗುರಿಯಾಗಿಸಿಕೊಂಡು ಬಾಂಬ್ ಬೆದರಿಕೆ ಸಂದೇಶಗಳು ಬಂದಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಮಡಿಕೇರಿ ನ್ಯಾಯಾಲಯ ಸಮುಚ್ಚಯಕ್ಕೆ ಅನಾಮಧೇಯ ವ್ಯಕ್ತಿ ಇ-ಮೇಲ್ ಮೂಲಕ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಸಂದೇಶ ಕಳುಹಿಸಿದ್ದು, ಪೊಲೀಸರು ತಕ್ಷಣ ಎಚ್ಚೆತ್ತುಕೊಂಡು ವಕೀಲರು, ಸಿಬ್ಬಂದಿ ಹಾಗೂ ಸಾರ್ವಜನಿಕರನ್ನು ಹೊರಗೆ ಕಳುಹಿಸಿದರು. ಬಳಿಕ ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನದಳ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿದರು. ಸಂದೇಶ ಕಳುಹಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ವಕೀಲರ ಸಂಘ ಆಕ್ರೋಶ ವ್ಯಕ್ತಪಡಿಸಿದೆ.
ಇದೇ ರೀತಿ ದಾವಣಗೆರೆ ಜಿಲ್ಲಾ ನ್ಯಾಯಾಲಯಕ್ಕೂ ಅಪರಿಚಿತ ವ್ಯಕ್ತಿಯಿಂದ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ತಮಿಳುನಾಡು ಮೂಲದ ವ್ಯಕ್ತಿಯಿಂದ ಜಡ್ಜ್ ಅವರ ಇ-ಮೇಲ್ ಐಡಿಗೆ ಮಧ್ಯಾಹ್ನ 12.30ಕ್ಕೆ ಆರ್ಡಿಎಕ್ಸ್ ಬಾಂಬ್ ಸ್ಫೋಟವಾಗಲಿದೆ ಎಂದು ತಿಳಿಸಲಾಗಿತ್ತು. ಮಾಹಿತಿ ತಿಳಿದ ತಕ್ಷಣ ನ್ಯಾಯಾಧೀಶರು ಮತ್ತು ಸಿಬ್ಬಂದಿ ಕೋರ್ಟ್‌ನಿಂದ ಹೊರಬಂದಿದ್ದು, ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳ ಸಿಬ್ಬಂದಿ ಪರಿಶೀಲನೆ ನಡೆಸಿದರು.
ಮತ್ತೊಂದೆಡೆ, ಹೈಕೋರ್ಟ್ ಧಾರವಾಡ ಪೀಠಕ್ಕೆ ಮತ್ತೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು ಆತಂಕ ಸೃಷ್ಟಿಸಿದೆ. ಇ-ಮೇಲ್ ಮೂಲಕ ಬಂದ ಸಂದೇಶದ ಹಿನ್ನೆಲೆ ವಕೀಲರು ಕೋರ್ಟ್‌ನಿಂದ ಹೊರಬಂದಿದ್ದು, ಗರಗ್ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ಕೈಗೊಂಡಿದ್ದಾರೆ. ಒಂದು ತಿಂಗಳ ಹಿಂದೆಯೂ ಇದೇ ರೀತಿಯ ಬೆದರಿಕೆ ಸಂದೇಶ ಬಂದಿತ್ತು.
ಹಾವೇರಿ ಜಿಲ್ಲಾ ನ್ಯಾಯಾಲಕ್ಕೂ ಫ್ಯಾಕ್ಸ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಕೋರ್ಟ್‌ನಿಂದ ವಕೀಲರು, ಸಿಬ್ಬಂದಿಯನ್ನು ಪೊಲಿಸರು ಹೊರಗೆ ಕಳಿಸಿದರು. ಹಾವೇರಿ ನ್ಯಾಯಾಲಯದಲ್ಲಿ ಇಂದಿನ ಎಲ್ಲಾ ಕಲಾಪಗಳನ್ನು ಮೊಟಕುಗೊಳಿಸಲಾಗಿದೆ.
ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದ ಕೋರ್ಟ್ಗೂ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, 12 ಆರ್ಡಿಎಕ್ಸ್ ಇಟ್ಟಿರುವುದಾಗಿ ಬೆದರಿಕೆ ಹಾಕಲಾಗಿದೆ.
ಇತ್ತೀಚಿನ ದಿನಗಳಲ್ಲಿ ಕರ್ನಾಟಕದಲ್ಲಿ ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಕಚೇರಿಗಳು ಹಾಗೂ ಸಾರ್ವಜನಿಕ ಸ್ಥಳಗಳಿಗೆ ಸಹ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶಗಳು ಬರುತ್ತಿರುವ ಘಟನೆಗಳು ಹೆಚ್ಚುತ್ತಿವೆ. ಬಹುತೇಕ ಸಂದರ್ಭಗಳಲ್ಲಿ ಹುಸಿ ಬೆದರಿಕೆಗಳಾಗಿದ್ದರೂ, ಭದ್ರತಾ ದೃಷ್ಟಿಯಿಂದ ಪೊಲೀಸರು ಗಂಭೀರವಾಗಿ ಪರಿಗಣಿಸಿ ತಪಾಸಣೆ ನಡೆಸುತ್ತಿದ್ದಾರೆ. ಈ ರೀತಿಯ ಕೃತ್ಯಗಳಿಗೆ ಕಾರಣವಾಗಿರುವ ಕಿಡಿಗೇಡಿಗಳನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಹಾಗೂ ವಕೀಲರ ಸಂಘಗಳು ಆಗ್ರಹಿಸಿವೆ.












