ಇತ್ತೀಚಿನ ಸುದ್ದಿ
ಸಿಸಿಬಿ ಪೊಲೀಸರ ಕಾರ್ಯಾಚರಣೆ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ; 2.40 ಲಕ್ಷ ರೂ. ಮೌಲ್ಯದ ಸೊತ್ತು ವಶ
22/03/2024, 00:04
ಮಂಗಳೂರು(reporterkarnataka.com):ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬಂಟ್ವಾಳದ ಲೋರೆಟ್ಟೋ ಬಾರೆ ಕಾಡು ಹೌಸ್ ನಿವಾಸಿ ಅಬ್ದುಲ್ ಸಮದ್ ಅಲಿಯಾಸ್ ಸಮದ್ ಅಕಿಯಾಸ್ ಚಮ್ಮು(36) ಎಂದು ಗುರುತಿಸಲಾಗಿದೆ. ಮಂಗಳೂರು ಸಿಸಿಬಿ ಪೊಲೀಸರು ನಗರದ ನೆಹರೂ ಮೈದಾನದ ಬಳಿಯಲ್ಲಿ ಅಕ್ರಮವಾಗಿ ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದಾಗ ದಸ್ತಗಿರಿ ಮಾಡಿದ್ದಾರೆ.
ಆರೋಪಿಯು ಬೆಂಗಳೂರಿನಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 46 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯಿಂದ 2,30,000/- ರೂ ಮೌಲ್ಯದ 46 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪಕವನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಒಟ್ಟು ಮೌಲ್ಯ ರೂ. 2,40,500 ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಆರೋಪಿಯ ವಿರುದ್ದ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ಹಾಗೂ ಮಾದಕ ವಸ್ತು ಮಾರಾಟದ ಪ್ರಕರಣ ದಾಖಲಾಗಿರುತ್ತದೆ.
ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಎಸಿಪಿ ಗೀತಾ ಕುಲಕರ್ಣಿ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐಯವರಾದ ಶರಣಪ್ಪ ಭಂಡಾರಿ ಮತ್ತು ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.