ಇತ್ತೀಚಿನ ಸುದ್ದಿ
ಚಳ್ಳಕೆರೆ: ಎಸ್ಸೆಸ್ಸೆಲ್ಸಿ ವಿಜ್ಞಾನ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ನಕಲು ಹೊಡೆಯಲು ಸಹಕಾರ: 4 ಮಂದಿ ಶಿಕ್ಷಕರ ಅಮಾನತು
30/03/2024, 21:09
ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ
info.reporterkarnataka@gmail.com
2023-24ನೇ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ನಕಲು ಮಾಡಲು ಸಹಕರಿಸಿದ ನಾಲ್ವರು ಶಿಕ್ಷಕರನ್ನು ಅಮಾನತು ಮಾಡಿ ಡಿಡಿಪಿಐ ಕೆ.ರವಿಶಂಕರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.
ಚಳ್ಳಕೆರೆ ತಾಲೂಕಿನ ಮಂಜರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ರೇವಣ್ಣ, ಗೋಸಿಕೆರೆಯ ರಾಧಾಕೃಷ್ಣ ಗ್ರಾಮಾಂತರ ಪ್ರೌಢಶಾಲೆಯ ಸಹ ಶಿಕ್ಷಕ ರಾಘವೇಂದ್ರ, ಪಿ.ಓಬನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಚಂದ್ರಶೇಖರ ಹಾಗೂ ಕೊರ್ಲಕುಂಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಪ್ರಕಾಶ್ ಅವರು ಅಮಾನತುಗೊಂಡಿದ್ದಾರೆ. ಶನಿವಾರ ಪರುಶುರಾಮಪುರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ವಿಜ್ಞಾನ ವಿಷಯದ ಪರೀಕ್ಷೆ ನಡೆಯುತ್ತಿದ್ದು, ಇವರೆಲ್ಲರೂ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರಾಗಿದ್ದರು. ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ನಕಲು ಮಾಡುತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳದೇ ವಿಧ್ಯಾರ್ಥಿಗಳಿಗೆ ನಕಲು ಮಾಡಲು ಸಹಕರಿಸುತ್ತಿರುವುದು ಕಂಡು ಬಂದಿದೆ. ನಕಲು ಮಾಡುವುದನ್ನು ತಡೆಯದೇ ಪರೀಕ್ಷಾ ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷತೆ, ಬೇಜವಾಬ್ದಾರಿತನ ಮತ್ತು ಕರ್ತವ್ಯ ಲೋಪ ಎಸಗಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಸಹ ಶಿಕ್ಷಕರನ್ನು ಅಮಾನತು ಮಾಡಲಾಗಿದೆ ಎಂದು ಡಿಡಿಪಿಐ ರವಿಶಂಕರ್ ರೆಡ್ಡಿ ಆದೇಶದಲ್ಲಿ ತಿಳಿಸಿದ್ದಾರೆ.