ಇತ್ತೀಚಿನ ಸುದ್ದಿ
ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದ ಉಂಟಾಗಿದ್ದ ದುರಂತ ಬಗ್ಗೆ ಮರು ತನಿಖೆ: ಸಿಎಂ ಸಿದ್ದರಾಮಯ್ಯ ಘೋಷಣೆ
27/06/2023, 21:05

ಹಾಸನ(reporterkarnataka.com): ಚಾಮರಾಜನಗರದಲ್ಲಿ ಕೋವಿಡ್ ಸಂದರ್ಭದಲ್ಲಿ ಆಕ್ಸಿಜನ್ ಕೊರತೆಯಿಂದ ಉಂಟಾಗಿದ್ದ ದುರಂತ ಪ್ರಕರಣದ ಮರುತನಿಖೆಯನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಹಾಸನದಲ್ಲಿ ನಡೆದ ಕೆಂಪೇಗೌಡ ಜಯಂತಿ ನಂತರ ಮಾತನಾಡಿದ ಅವರು, ಅಂದಿನ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಅವರು ಅಲ್ಲಿ ಸತ್ತಿರುವುದು ಇಬ್ಬರೇ ಎಂದಿದ್ದರು, ಆದರೆ ಸತ್ತವರ ಸಂಖ್ಯೆ 30ಕ್ಕೂ ಹೆಚ್ಚಿತ್ತು. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಮೃತರ ಕುಟುಂಬಗಳಿಗೆ ನ್ಯಾಯ ಕೊಡಿಸುತ್ತೇವೆ ಎಂದು ಮುಖ್ಯಮಂತ್ರಿ ಹೇಳಿದರು.
ಬಿಜೆಪಿ ಸರಕಾರದ ಪಿಎಸ್ಐ ನೇಮಕಾತಿ ಹಗರಣ, ಬಿಟ್ ಕಾಯಿನ್ ಹಗರಣ, 4 ವೈದ್ಯಕೀಯ ಕಾಲೇಜು ನಿರ್ಮಾಣದಲ್ಲಿ ಅವ್ಯವಹಾರ, 40% ಕಮಿಷನ್, ಕೊರೊನಾ ಸಂದರ್ಭದಲ್ಲಿ ವೈದ್ಯಕೀಯ ಸಾಮಗ್ರಿಗಳ ಖರೀದಿಯಲ್ಲಿ ಅವ್ಯವಹಾರ, ನೀರಾವರಿ ಕಾಮಗಾರಿಗಳಲ್ಲಿ ಅವ್ಯವಹಾರಗಳ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.
ಕಾಂಗ್ರೆಸ್ ಪಕ್ಷ ಕೊಟ್ಟ ಮಾತಿನಂತೆ ಒಂದು ಗ್ಯಾರಂಟಿಯನ್ನು ಈಗಾಗಲೇ ಜಾರಿ ಮಾಡಿದೆ. ಜುಲೈ ಒಂದರಿಂದ ಗೃಹಜ್ಯೋತಿ ಯೋಜನೆಯನ್ನು ಜಾರಿಗೆ ತರುತ್ತೇವೆ. ಗೃಹಲಕ್ಷ್ಮೀ ಯೋಜನೆಯನ್ನು ಆಗಸ್ಟ್ 15 ರ ನಂತರ ಜಾರಿ ಮಾಡಲಾಗುವುದು. ಈ ಸಂಬಂಧ ಈಗಾಗಲೇ ಅರ್ಜಿ ಕರೆದಿದ್ದು, ಅರ್ಜಿಗಳು ಸ್ವೀಕಾರವಾಗುತ್ತಿವೆ. ಅರ್ಜಿ ಪ್ರಕ್ರಿಯೆ ಪೂರ್ಣಗೊಂಡ ನಂತರ ಯೋಜನೆಯನ್ನು ಜಾರಿಗೆ ಕೊಡಲಾಗುವುದು ಎಂದು ತಿಳಿಸಿದರು.