ಇತ್ತೀಚಿನ ಸುದ್ದಿ
ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ; ಕನ್ನಡಪರ ಸಂಘಟನೆಗಳ ಆಕ್ರೋಶ
12/12/2024, 12:27

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ
info.reporterkarnataka@gmail.com
ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವಿನ ಪ್ರಕರಣಗಳ ಬೆನ್ನಲ್ಲೇ ಚಿತ್ರದುರ್ಗದಲ್ಲಿ ಹಸಿ ಬಾಣಂತಿಯೊಬ್ಬರು ಮೃತಪಟ್ಟಿದ್ದಾರೆ.
ಚಿತ್ರದುರ್ಗ ಜಿಲ್ಲಾಸ್ಪತ್ರೆಯ ವೈದ್ಯರ ನಿರ್ಲಕ್ಷದಿಂದಾಗಿ ಈ ಸಾವು ಸಂಭವಿಸಿದೆ ಎಂದು ಆರೋಪಿಸಲಾಗಿದೆ.
ಸಿಝರಿನ್ ಆಪರೇಶನ್ ಆದ ಬಳಿಕ ಚಳ್ಳಕೆರೆ ತಾಲೂಕಿನ ಜಾಗನೂರುಹಟ್ಟಿ ಗ್ರಾಮದ ಬಾಣಂತಿ ರೋಜಮ್ಮ(25) ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ನಂತರ ಅವರಿಗೆ ಹೊಟ್ಟೆ ನೋವು ಮತ್ತು ವಾಂತಿ ಕಾಣಿಸಿಕೊಂಡಿತು. ಬಳಿಕ ಪುನಃ ಅವರನ್ನು
ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಸಕಾಲದಲ್ಲಿ ಚಿಕಿತ್ಸೆ ದೊರೆಯದೆ ಅವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಈ ಘಟನೆಯಿಂದ ಸಂಬಂಧಿಕರು ಮತ್ತು ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ.
ವೈದ್ಯೆ ಡಾ.ರೂಪಶ್ರೀ ಸಿಝರಿನ್ ಆಪರೇಷನ್ ಮಾಡಿದ್ದು, ಗಂಡು ಮಗುವಿಗೆ ರೋಜಮ್ಮ ಜನ್ಮ ನೀಡಿದ್ದರು. ಐದು ದಿನಗಳ ಬಳಿಕ ಜಿಲ್ಲಾಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಆದರೆ ಆಗಾಗ ಹೊಟ್ಟೆನೋವು ಕಾಣಿಸಿಕೊಳ್ಳುತ್ತಿತ್ತು. ಮಂಗಳವಾರ ಬೆಳಗ್ಗೆಯಿಂದ ವಾಂತಿ ಶುರುವಾಗಿದೆ. ಹೀಗಾಗಿ, ನಾಯಕನಹಟ್ಟಿ ಸರ್ಕಾರಿ ಆಸ್ಪತ್ರೆ ತೆರಳಿ ಚಿಕಿತ್ಸೆ ಪಡೆದು ಹೆಚ್ಚಿನ ಚಿಕತ್ಸೆಗೆಂದು ಜಿಲ್ಲಾಸ್ಪತ್ರೆಗೆ ಬಂದಿದ್ದಾರೆ. ಆದರೆ ಜಿಲ್ಲಾಸ್ಪತ್ರೆಯಲ್ಲಿ ಸಕಾಲಕ್ಕೆ ಸೂಕ್ತ ಚಿಕಿತ್ಸೆ ಸಿಗದೆ ರೋಜಮ್ಮ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ.
ಸಿಝಜರಿನ್ ಆಪರೇಷನ್ ಸಮರ್ಪಕವಾಗಿ ಆಗದ ಕಾರಣ ಇನ್ಫೆಕ್ಷನ್ ಆಗಿದೆ. ಹೊಲಿಗೆ ಹಾಕಿದ ಜಾಗದಲ್ಲಿ ಕೀವು ತುಂಬಿಕೊಂಡಿತ್ತು. ಹೀಗಾಗಿ ರೋಜಮ್ಮಳ ಸಾವಿಗೆ ವೈದ್ಯರ ನಿರ್ಲಕ್ಷವೇ ಕಾರಣವಾಗಿದೆ. ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಿಕರು ಆಗ್ರಹಿಸಿದ್ದಾರೆ.
ಮೃತ ರೋಜಮ್ಮಗೆ 40 ದಿನದ ಹಸುಳೆ ಸೇರಿದಂತೆ
ಮೂವರು ಮಕ್ಕಳಿದ್ದಾರೆ.
ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ. ಸೂಕ್ತ ಪರಿಹಾರ ನೀಡಬೇಕೆಂಬುದು ಸಂಬಂಧಿಕರು ಆಗ್ರಹಿಸಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾಸ್ಪತ್ರೆಯ ಆರ್ಎಂಓ ಡಾ. ಆನಂದ ಪ್ರಕಾಶ್,ಪೋಸ್ಟ್ ಮಾರ್ಟ್ಂ ಬಳಿಕ ಸಾವಿಗೆ ನಿಖರ ಕಾರಣ ತಿಳಿಯಲಿದೆ.ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.