ಇತ್ತೀಚಿನ ಸುದ್ದಿ
ದ.ಕ. ಜಿಲ್ಲೆಯಲ್ಲಿ ಮರಳು ಸಮಸ್ಯೆ ಬಗೆಹರಿಸಲು ಗೃಹ ಸಚಿವರಿಗೆ ಇನಾಯತ್ ಅಲಿ, ಮಿಥುನ್ ರೈ ಮನವಿ: ಪರಿಹಾರದ ಭರವಸೆ
06/11/2023, 20:23

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಹಲವು ತಿಂಗಳಿಂದ ಮರಳು ಸಮಸ್ಯೆ ಉಂಟಾಗುತ್ತಿದ್ದು, ಸಮಸ್ಯೆ ಪರಿಹರಿಸುವಂತೆ ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರಿಗೆ ಕಾಂಗ್ರೆಸ್ ನಾಯಕರಾದ ಇನಾಯತ್ ಆಲಿ ಹಾಗೂ ಮಿಥುನ್ ರೈ ಮನವಿ ಮಾಡಿದ್ದಾರೆ.
ಜಿಲ್ಲೆಯಲ್ಲಿ ಕಳೆದ ಹಲವು ತಿಂಗಳಿಂದ ಮರಳು ಸಮಸ್ಯೆ ಉಂಟಾಗುತ್ತಿದ್ದು, ಲಭ್ಯವಿರುವ ಮರಳಿಗೆ ದುಬಾರಿ ಬೆಲೆ ನೀಡಬೇಕಾಗಿದೆ. ಇದರಿಂದ ಜಿಲ್ಲೆಯಲ್ಲಿ ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಮರಳು ಖರೀದಿ ಅಸಾಧ್ಯವಾಗಿದೆ. ಈ ಕಾರಣದಿಂದ ಜಿಲ್ಲೆಯಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಗಳು ಹಲವೆಡೆ ಸ್ಥಗಿತಗೊಂಡಿದೆ.
ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಮಂಗಳೂರಿಗೆ ಆಗಮಿಸಿದ ಸಂದರ್ಭ ಈ ವಿಚಾರವಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಹಾಗೂ ಮಿಥುನ್ ರೈ ಗೃಹ ಸಚಿವರೊಂದಿಗೆ ಚರ್ಚೆ ನಡೆಸಿದರು. ಮರಳುಗಾರಿಕೆಗೆ ಅನುಮತಿಯ ವಿಚಾರದ ಬಗ್ಗೆ ಗೃಹ ಸಚಿವರ ಗಮನಕ್ಕೆ ತಂದರು.
ಈ ಬಗ್ಗೆ ತಕ್ಷಣವೇ ಸ್ಪಂದಿಸಿದ ಗೃಹ ಸಚಿವರು ಸ್ಥಳದಲ್ಲಿದ್ದ ಜಿಲ್ಲಾಧಿಕಾರಿಗಳಿಗೆ ಹಾಗೂ ಪೊಲೀಸ್ ಆಯುಕ್ತರಿಗೆ ಸೂಕ್ತ ಕ್ರಮಕೈಗೊಂಡು ಸಮಸ್ಯೆ ಬಗೆಹರಿಸುವಂತೆ ಸೂಚಿಸಿದರು.