7:56 PM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಡಿಜಿಟಲ್ ಪ್ರಪಂಚಕ್ಕೆ ಎಂಟ್ರಿ: ತುಳು ಲಿಪಿ ಯೂನಿಕೋಡ್ ನಕಾಶೆ ಸೇರ್ಪಡೆಗೆ ಕ್ರಮ

21/07/2021, 07:42

ಮಂಗಳೂರು(reporterkarnataka news): ಕರ್ನಾಟಕ ರಾಜ್ಯ ತುಳು ಸಾಹಿತ್ಯ ಅಕಾಡೆಮಿಯು ಬಹು ಕಾಳಜಿಯಿಂದ ಇತಿಹಾಸದ ದಾಖಲೆಗಳನ್ನು ಆಧರಿಸಿ ರೂಪಿಸಿದ ತುಳು ಲಿಪಿಯನ್ನು ಸೂಕ್ತವಾಗಿ ಯುನಿಕೋಡ್‌ ನಕಾಶೆ ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲು ಅಕಾಡೆಮಿಗೆ ಸೂಚಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.  

ಈ ಕ್ರಮದಿಂದಾಗಿ ತುಳು ಲಿಪಿಯು ಯುನಿಕೋಡ್‌ ನಕಾಶೆಯಲ್ಲಿ ಅಧಿಕೃತವಾಗಿ ಸೇರ್ಪಡೆಯಾಗುವ ಕಾರ್ಯವು ವೇಗ ಪಡೆಯಲಿದೆ ಎಂದು ಹೇಳಿರುವ ಅವರು, ಸುಮಾರು ಹತ್ತು ವರ್ಷಗಳಿಂದ ತುಳು ಲಿಪಿಯನ್ನು ರೂಪಿಸುವ ಬಗ್ಗೆ ಹಲವು ಚರ್ಚೆಗಳು ನಡೆದಿದ್ದವು. ಅಂತಿಮವಾಗಿ ತುಳು ಭಾಷಾ ಮತ್ತು ಲಿಪಿ ತಜ್ಞರು ಸರ್ವಾನುಮತಿಯಿಂದ ರೂಪಿಸಿದ ತುಳು ಲಿಪಿ ಪಟ್ಟಿಯನ್ನು ಅಕಾಡೆಮಿಯು ಅಂಗೀಕರಿಸಿ ಯುನಿಕೋಡ್‌ ನಕಾಶೆಗೆ ಸೇರಿಸಲು ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.

ಈ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ತುಳು ಲಿಪಿ ಪಟ್ಟಿಯನ್ನು ಪರಾಮರ್ಶಿಸಿ ಅನುಮೋದಿಸಲು ಮೈಸೂರಿನಲ್ಲಿರುವ  ಕೇಂದ್ರ ಸರ್ಕಾರದ ಭಾರತೀಯ ಭಾಷಾ ಸಂಸ್ಥಾನಕ್ಕೆ ಕರ್ನಾಟಕ ಸರ್ಕಾರದಿಂದ ಕೋರಲಾಗಿತ್ತು. ಭಾಭಾ ಸಂಸ್ಥಾನವು ಇದಕ್ಕಾಗಿ ಭಾಷಾ ತಜ್ಞರ ಸಮಿತಿಯನ್ನು ರಚಿಸಿ, ಚರ್ಚಿಸಿ ಲಿಪಿ ಪಟ್ಟಿಯನ್ನು ಅನುಮೋದಿಸಿ, ಯುನಿಕೋಡ್‌ ಕನ್ಸಾರ್ಶಿಯಂಗೆ ಸಲ್ಲಿಸಲು ಶಿಫಾರಸು ಮಾಡಿತು. ಅದರಂತೆ ಈಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ  ತುಳು ಅಕಾಡೆಮಿಗೆ ಪತ್ರ ಬರೆಯಲಾಗಿದೆ ಎಂದು ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.

ಅಲ್ಲದೆ ಯುನಿಕೋಡ್‌ ನಕಾಶೆಗೆ ಸೇರಿಸಲು ಅಗತ್ಯವಿರುವ ಇನ್ನಿತರೆ ತಾಂತ್ರಿಕ ಅಂಶಗಳ ಬಗ್ಗೆಯೂ ಗಮನ ಕೊಡುವಂತೆ ತಿಳಿಸಲಾಗಿದೆ ಎಂದು ಅವರು ತಿಳಿಸಿದರು.

ತುಳು ಲಿಪಿಯನ್ನು ಯುನಿಕೋಡ್‌ ನಕಾಶೆಗೆ ತಕ್ಕಂತೆ ರೂಪಿಸುವಲ್ಲಿ ಶ್ರಮವಹಿಸಿದ ಎಲ್ಲ ತಜ್ಞರಿಗೂ ಸಚಿವ ಅರವಿಂದ ಲಿಂಬಾವಳಿ ಅಭಿನಂದನೆ ಸಲ್ಲಿಸಿದ್ದಾರೆ.

ಡಿಜಿಟಲ್‌ ವೇದಿಕೆಗಳಲ್ಲಿ, ಮುದ್ರಿತ ಸಾಹಿತ್ಯದಲ್ಲಿ, ಪ್ರಚಾರ ಸಾಹಿತ್ಯದಲ್ಲಿ – ಹೀಗೆ ತುಳು ಲಿಪಿಯು ಹೆಚ್ಚು ಹೆಚ್ಚು ಬಳಕೆಗೆ  ಬಂದರೆ ಲಿಪಿಯನ್ನು ರೂಪಿಸಿದ್ದಕ್ಕೆ ನ್ಯಾಯ  ಒದಗಿಸಿದಂತಾಗುತ್ತದೆ ಎಂದಿರುವ ಅವರು ಕರ್ನಾಟಕದ ಇತಿಹಾಸದಲ್ಲಿ ಒಂಬತ್ತು  ಶತಮಾನಗಳ  ಅತಿದೀರ್ಘವಾದ ಆಡಳಿತವನ್ನು ನಡೆಸಿದ ಖ್ಯಾತಿಯನ್ನು ಹೊಂದಿದ ತುಳು ಸಂಸ್ಕೃತಿಯ ಪ್ರತೀಕವಾದ ತುಳು ಲಿಪಿಯು ಯುನಿಕೋಡ್‌ಗೆ  ಸೇರುತ್ತಿರುವುದಕ್ಕೆ ಲಕ್ಷಾಂತರ ತುಳು ಭಾಷಿಗರು ತೋರಿದ  ಸಂಭ್ರಮದಲ್ಲಿ ಭಾಗಿಯಾಗಲು ನನಗೂ ಹರ್ಷವಾಗುತ್ತಿದೆ ಎಂದು ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ.

ಕನ್ನಡ ನಾಡಿನ ಉಳಿದೆಲ್ಲ ಭಾಷೆಗಳಂತೆಯೇ ತುಳು ಭಾಷೆ, ಸಂಸ್ಕೃತಿಯ ಉಳಿವು, ಬೆಳವಣಿಗೆಗಾಗಿ ನಮ್ಮ ಸರ್ಕಾರದ ಪ್ರಯತ್ನವು ನಿರಂತರವಾಗಿ ನಡೆಯುತ್ತದೆ ಎಂದು ಸಚಿವ ಲಿಂಬಾವಳಿ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು