ಇತ್ತೀಚಿನ ಸುದ್ದಿ
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಹೈಕೋರ್ಟ್ ಬಿಗ್ ಶಾಕ್: ಬ್ಯಾಗ್ ಹಗರಣದ ತನಿಖೆಗೆ ಆದೇಶ
02/04/2026, 19:42
ಬೆಂಗಳೂರು(reporterkarnataka.com): ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಕರ್ನಾಟಕ ಹೈಕೋರ್ಟ್‌ನಲ್ಲಿ ತೀವ್ರ ಹಿನ್ನಡೆಯಾಗಿದೆ. ಪ್ರಕರಣದ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನು ತೆರವುಗೊಳಿಸಿರುವ ನ್ಯಾಯಾಲಯ, ಭ್ರಷ್ಟಾಚಾರ ತಡೆ ಕಾಯ್ದೆಯಡಿ ತನಿಖೆ ಮುಂದುವರಿಸಲು ಲೋಕಾಯುಕ್ತಕ್ಕೆ ಹಸಿರು ನಿಶಾನೆ ತೋರಿಸಿದೆ.
2020-21ರ ಅವಧಿಯಲ್ಲಿ ರೋಹಿಣಿ ಸಿಂಧೂರಿ ಅವರು ಮೈಸೂರು ಜಿಲ್ಲಾಧಿಕಾರಿಯಾಗಿದ್ದಾಗ, ಪ್ಲಾಸ್ಟಿಕ್ ಮುಕ್ತ ಅಭಿಯಾನದ ಅಡಿಯಲ್ಲಿ ಸುಮಾರು 14.71 ಲಕ್ಷ ಬಟ್ಟೆ ಬ್ಯಾಗ್‌ಗಳನ್ನು ಖರೀದಿಸಲು ನಿರ್ಧರಿಸಲಾಗಿತ್ತು. ಮಾರುಕಟ್ಟೆಯಲ್ಲಿ ಪ್ರತಿ ಬ್ಯಾಗ್‌ಗೆ 10 ರಿಂದ 13 ರೂಪಾಯಿ ದರವಿದ್ದರೂ, ಕೆಟಿಪಿಪಿ (KTPP) ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿ ಪ್ರತಿ ಬ್ಯಾಗ್‌ಗೆ 52 ರೂಪಾಯಿಯಂತೆ ಒಟ್ಟು 14 ಕೋಟಿ ರೂಪಾಯಿ ವೆಚ್ಚದಲ್ಲಿ ಖರೀದಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಈ ಪ್ರಕ್ರಿಯೆಯಿಂದ ಸರ್ಕಾರಕ್ಕೆ ಅಂದಾಜು 7.55 ಕೋಟಿ ರೂಪಾಯಿ ಆರ್ಥಿಕ ನಷ್ಟವಾಗಿದೆ ಎಂದು ದೂರಲಾಗಿತ್ತು.ಈ ಅಕ್ರಮದ ಕುರಿತು ಕೆ.ಆರ್. ನಗರದ ಮಾಜಿ ಶಾಸಕ ಸಾ.ರಾ.ಮಹೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಪ್ರಕರಣದ ಗಾಂಭೀರ್ಯ ಅರಿತ ಸರ್ಕಾರವು ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಅನುಮತಿ ನೀಡಿತ್ತು. ಇದನ್ನು ಪ್ರಶ್ನಿಸಿ ಐಎಎಸ್ ಅಧಿಕಾರಿ ನ್ಯಾಯಾಲಯದ ಮೊರೆ ಹೋಗಿ ತಡೆಯಾಜ್ಞೆ ತಂದಿದ್ದರು. ಬುಧವಾರ (ಏಪ್ರಿಲ್ 1) ಈ ಅರ್ಜಿಯ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು, ಸಾರ್ವಜನಿಕ ಹಣದ ದುರುಪಯೋಗದ ಆರೋಪಗಳಿರುವುದರಿಂದ ತನಿಖೆ ಅಗತ್ಯ ಎಂದು ಅಭಿಪ್ರಾಯಪಟ್ಟಿದೆ. ಈ ಮೂಲಕ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17 (A) ಅಡಿಯಲ್ಲಿ ತನಿಖೆ ನಡೆಸಲು ಲೋಕಾಯುಕ್ತ ಪೊಲೀಸರಿಗೆ ಇದ್ದ ಕಾನೂನು ಅಡೆತಡೆಗಳು ನಿವಾರಣೆಯಾದಂತಾಗಿದೆ.












