ಇತ್ತೀಚಿನ ಸುದ್ದಿ
ಆಗ್ರಾ-ಲಕ್ನೋ ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ | ಕಂದಕಕ್ಕೆ ಬಿದ್ದ ಬಸ್: 3 ಪ್ರಯಾಣಿಕರ ದಾರುಣ ಸಾವು; 45 ಜನರಿಗೆ ಗಾಯ
10/11/2026, 16:29
ಲಕ್ನೋ(reporterkarnataka.com): ಲಕ್ನೋ-ಆಗ್ರಾ ಎಕ್ಸ್ಪ್ರೆಸ್ವೇಯ ಝೀರೋ ಪಾಯಿಂಟ್ ಬಳಿ ರಾಜಸ್ಥಾನದ ಭಿವಾಡಿಯಿಂದ ಬಿಹಾರಕ್ಕೆ ತೆರಳುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ 40 ಫೀಟ್ ಆಳದ ಖಾತೆಗೆ ಬಿದ್ದ ಪರಿಣಾಮ ಮೂವರು ಮೃತಪಟ್ಟು, ಸುಮಾರು 45 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ಸೋಮವಾರ ನಡೆದಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.
ಪಾರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಭೀಕರ ಅಪಘಾತದಲ್ಲಿ ಮಗು ಸೇರಿದಂತೆ 15 ರಿಂದ 16 ಪ್ರಯಾಣಿಕರು ಬಸ್ನೊಳಗೆ ಸಿಲುಕಿಕೊಂಡಿದ್ದು, ಅಗ್ನಿಶಾಮಕ ದಳ ಮತ್ತು ತುರ್ತು ಸೇವಾ ಸಿಬ್ಬಂದಿ ಕೇವಲ 35 ನಿಮಿಷಗಳಲ್ಲಿ ಮಲ್ಟಿ ಡಿಸಾಸ್ಟರ್ ರೆಸ್ಕ್ಯೂ ವೆಹಿಕಲ್ (MDRV) ಸಹಾಯದಿಂದ ಅವರನ್ನೆಲ್ಲಾ ಯಶಸ್ವಿಯಾಗಿ ರಕ್ಷಿಸಿದ್ದಾರೆ. ಗಾಯಾಳುಗಳನ್ನು ಕೆಜಿಎಂಯು (KGMU) ಟ್ರಾಮಾ ಸೆಂಟರ್ ಹಾಗೂ ಲೋಕಬಂಧು ಆಸ್ಪತ್ರೆಗೆ ಸೇರಿಸಲಾಗಿದ್ದು, ತೀವ್ರವಾಗಿ ಗಾಯಗೊಂಡವರಿಗೆ ಕೆಜಿಎಂಯು ಟ್ರಾಮಾ ಸೆಂಟರ್ನಲ್ಲಿ ತಜ್ಞ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿ ವಿಶಾಕ್ ಜಿ. ಅವರು ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಈ ದುರಂತದ ಕುರಿತು ತೀವ್ರ ಶೋಕ ವ್ಯಕ್ತಪಡಿಸಿದ್ದು, ಸಂತ್ರಸ್ತ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ಅಗತ್ಯವಿರುವ ಎಲ್ಲಾ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಗಾಯಾಳುಗಳಿಗೆ ಸೂಕ್ತ ಹಾಗೂ ಉಚಿತ ವೈದ್ಯಕೀಯ ಚಿಕಿತ್ಸೆ ಖಚಿತಪಡಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವ ಸಿಎಂ ಯೋಗಿ, ಗಾಯಾಳುಗಳು ಬೇಗನೆ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.













