ಇತ್ತೀಚಿನ ಸುದ್ದಿ
ಜ. 24ರಂದು ‘ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ’: ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜುಗಳಲ್ಲಿ ಪಿಂಕ್ ಲೈಟ್ ಆಚರಣೆ
23/01/2025, 10:50

ಮಂಗಳೂರು (reporterkarnataka.com): ಆರೋಗ್ಯ ಇಲಾಖೆಯ ಜಿಲ್ಲಾ ಸಲಹಾ ಸಮಿತಿ ಮತ್ತು ಜಿಲ್ಲಾ ಮೇಲ್ವಿಚಾರಣಾ ಮತ್ತು ತಪಾಸಣಾ ಸಮಿತಿ ಸಭೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಸಲಹಾ ಸಮಿತಿ ಅಧ್ಯಕ್ಷೆ ಡಾ.ಅಮೃತ ಭಂಡಾರಿ ಅಧ್ಯಕ್ಷತೆಯಲ್ಲಿ ನಡೆಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಆರ್ ತಿಮ್ಮಯ್ಯ ಮಾತನಾಡಿ, ಜಿಲ್ಲೆಯಲ್ಲಿರುವ ಎಲ್ಲಾ ಸ್ಕ್ಯಾನಿಂಗ್ ಸಂಸ್ಥೆಗಳಿಗೆ ಮೂರು ತಿಂಗಳಿಗೊಮ್ಮೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಪಿಸಿ & ಪಿ.ಎನ್.ಡಿ.ಟಿ ಕಾಯ್ದೆ ಮತ್ತು ಕಾನೂನು ಸಮರ್ಪಕವಾಗಿ ಅನುಷ್ಠಾನಗೊಳಿಸದಿರುವ ಸಂಸ್ಥೆಗಳಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಎಂದು ಸೂಚಿಸಿದರು. ಸರ್ಕಾರಿ /ಖಾಸಗಿ ಆಸ್ಪತ್ರೆಗೆ ಸ್ಕ್ಯಾನಿಂಗ್ ಮಾಡಿಸಲು ಬರುವ ಪ್ರತಿ ಗರ್ಭಿಣಿ ಮಹಿಳೆಯರು ಕಡ್ಡಾಯವಾಗಿ ತಾಯಿಕಾರ್ಡ್ ತೆಗೆದುಕೊಂಡು ಹೋಗಬೇಕು ಎಂದು ಹೇಳಿದರು.
ಹೆಣ್ಣು ಭ್ರೂಣ ಮತ್ತು ಶಿಶು ಹತ್ಯೆ ತಡೆಯುವ ನಿಟ್ಟಿನಲ್ಲಿ ಜನವರಿ 24ರಂದು “ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ”ಯನ್ನು ಎಲ್ಲಾ ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜುಗಳಲ್ಲಿ ಪಿಂಕ್ ಲೈಟ್ ಹಾಕಿ ಆಚರಿಸಬೇಕು. ಪೂರ್ವಲಿಂಗ ಪತ್ತೆ ಮತ್ತು ಹತ್ಯೆಯನ್ನು ತಡೆಯುವ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಅವರು ಸೂಚಿಸಿದರು.
ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ದೀಪಾ ಪ್ರಭು ಸಭೆಯ ಕಾರ್ಯಸೂಚಿಯನ್ನು ಸಭೆಯ ಗಮನಕ್ಕೆ ತಂದರು.
ಜಿಲ್ಲಾ ಸಲಹಾ ಸಮಿತಿಯ ಸದಸ್ಯರು ಮತ್ತು ಜಿಲ್ಲಾ ಮೇಲ್ವಿಚಾರಣಾ ಮತ್ತು ತಪಾಸಣಾ ಸಮಿತಿ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.