ಇತ್ತೀಚಿನ ಸುದ್ದಿ
Kodagu | ಗುಡ್ಡೆಮನೆ ಅಪ್ಪಯ್ಯಗೌಡರಿಗೆ ನಿರಂತರ ಗೌರವ ಸಲ್ಲಿಸುವ ಕಾರ್ಯವಾಗಲಿ: ಗಣ್ಯರ ಕರೆ
01/11/2026, 20:34
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಆಶ್ರಯದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಸಂಸ್ಮರಣಾ ದಿನಾಚರಣೆಯು ನಗರದ ಪ್ರತಿಮೆ ಬಳಿ ಆಚರಿಸಲಾಯಿತು.
ಮಡಿಕೇರಿ ಶಾಸಕ ಡಾ. ಮಂತರ್ ಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಂ.ಜಿ.ಮೋಹನ್ ದಾಸ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ವೈ.ರಾಜೇಶ್, ಜಿಲ್ಲಾ ಪೊಲೀಸ್ ವರಿಷ್ಟಧಿಕಾರಿ ಆರ್.ಎನ್.ಬಿಂದುಮಣಿ, ಹೆಚ್ಚುವರಿ ಜಿಲ್ಲಾಧಿಕಾರಿ ಜಯಲಕ್ಷ್ಮಿ, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಆನಂದ ಕರಂದ್ಲಾಜೆ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರಾದ ಕೊಲ್ಯದ ಗಿರೀಶ್, ಲಕ್ಷ್ಮಿನಾರಾಯಣ ಕಜೆಗದ್ದೆ, ಪ್ರಮುಖರಾದ ಸೂರ್ತಲೆ ಸೋಮಣ್ಣ, ಅಕಾಡೆಮಿ ಸದಸ್ಯರು ಸೇರಿದಂತೆ ಹಲವು ಗಣ್ಯರು ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆಗೆ ಪುಷ್ಪಗುಚ್ಛ ಅರ್ಪಿಸಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು, ಗುಡ್ಡೆಮನೆ ಅಪ್ಪಯ್ಯ ಗೌಡರು ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಮಹಾನ್ ಹೋರಾಟಗಾರರಾಗಿದ್ದಾರೆ. ಅವರಿಗೆ ಕೇವಲ ಒಂದು ದಿನ ಗೌರವ ಸಲ್ಲಿಸುವುದಕ್ಕೆ ಸೀಮಿತವಾಗದೆ, ವರ್ಷವಿಡೀ ಅವರ ತ್ಯಾಗ ಮತ್ತು ಸಾಧನೆಗಳನ್ನು ಸ್ಮರಿಸುವ ಕಾರ್ಯವಾಗಬೇಕು ಎಂದು ಕರೆ ನೀಡಿದರು.
ಅಪ್ಪಯ್ಯ ಗೌಡರ ತ್ಯಾಗ ಮತ್ತು ಬಲಿದಾನವನ್ನು ಪ್ರತಿಯೊಬ್ಬರೂ ನಿರಂತರವಾಗಿ ಸ್ಮರಿಸಬೇಕು. ಅವರ ಕುಟುಂಬದವರಿಗೂ ಗೌರವ ಹಾಗೂ ಧೈರ್ಯ ತುಂಬುವ ಕೆಲಸವನ್ನು ಸಮಾಜ ಮತ್ತು ಸಾರ್ವಜನಿಕರು ಮಾಡಬೇಕು. ದೇಶದ ಸ್ವಾತಂತ್ರ್ಯಕ್ಕಾಗಿ ಅವರು ತಮ್ಮ ಜೀವವನ್ನೇ ಕಳೆದುಕೊಂಡಿದ್ದು, ಅವರ ಕೊಡುಗೆಯನ್ನು ಎಂದಿಗೂ ಮರೆಯಬಾರದು ಎಂದು ಹೇಳಿದರು.
ಅಪ್ಪಯ್ಯ ಗೌಡರ ಸ್ಮರಣಾರ್ಥ ನಡೆಯುತ್ತಿರುವ ಕಾರ್ಯಕ್ರಮಗಳು ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ವಿವಿಧ ಸಂಘಟನೆಗಳು ಕೈಜೋಡಿಸುತ್ತಿರುವುದು ಶ್ಲಾಘನೀಯ. ಈಗಾಗಲೇ ಅಭಿವೃದ್ಧಿ ಕಾಮಗಾರಿಗೆ ಸಹಕಾರ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಹೆಚ್ಚುವರಿಯಾಗಿ 10 ಲಕ್ಷ ರೂ. ಅನುದಾನ ನೀಡುವ ಮೂಲಕ ಬಾಕಿ ಇರುವ ಕಾಮಗಾರಿ ಪೂರ್ಣಗೊಳಿಸಲು ಸಹಕರಿಸಲಾಗುವುದು ಎಂದು ತಿಳಿಸಿದರು.
ಅಪ್ಪಯ್ಯ ಗೌಡರು ಯಾವ ಉದ್ದೇಶಕ್ಕಾಗಿ ಸ್ವಾತಂತ್ರ್ಯ ಹೋರಾಟ ನಡೆಸಿದರೋ, ಅವರ ಆಶಯಗಳನ್ನು ಅರ್ಥಮಾಡಿಕೊಂಡು ಇಂದಿನ ಸಮಾಜದಲ್ಲಿ ಒಗ್ಗಟ್ಟು ಪ್ರದರ್ಶಿಸುವುದು ಅತ್ಯಗತ್ಯ. ಸಮಾಜದ ಅಭಿವೃದ್ಧಿ ಹಾಗೂ ಸಾಮರಸ್ಯಕ್ಕಾಗಿ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಕರೆ ನೀಡಿದರು.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅವರು ಮಾತನಾಡಿ, ಅಪ್ಪಯ್ಯ ಗೌಡರ ಸ್ಮರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವುದರ ಜೊತೆಗೆ ಜನಸಾಮಾನ್ಯರಿಗೆ ಅವರ ಹೋರಾಟ ಮತ್ತು ಕೊಡುಗೆಗಳ ಅರಿವು ಮೂಡಿಸುವ ರೀತಿಯಲ್ಲಿ ಪ್ರತಿವರ್ಷ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವ ಅರೆಭಾಷೆ ಅಕಾಡೆಮಿಯ ಕಾರ್ಯ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಅಪ್ಪಯ್ಯ ಗೌಡರು ಅರೆಭಾಷೆ ಗೌಡ ಸಮುದಾಯಕ್ಕೆ ಸೇರಿದವರಾಗಿದ್ದರೂ, ಅವರು ಕೇವಲ ಒಂದು ಸಮುದಾಯದ ನಾಯಕರಲ್ಲ. ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷ್ ಸಾಮ್ರಾಜ್ಯದ ವಿರುದ್ಧ ಹೋರಾಡಿದ ಧೀಮಂತ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು. ಅವರ ಜೀವನ, ಹೋರಾಟ ಹಾಗೂ ತ್ಯಾಗ ಇಡೀ ರಾಜ್ಯ ಮತ್ತು ದೇಶಕ್ಕೆ ಮಾದರಿಯಾಗಿದೆ ಎಂದು ತಿಳಿಸಿದರು.
ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣತ್ಯಾಗ ಮಾಡಿದ ಅಪ್ಪಯ್ಯ ಗೌಡರ ಆದರ್ಶಗಳನ್ನು ಪ್ರತಿಯೊಬ್ಬ ನಾಗರಿಕರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅವರ ಹೋರಾಟ ಮತ್ತು ಬಲಿದಾನವನ್ನು ಸ್ಮರಿಸುವುದು ಕೇವಲ ಒಂದು ದಿನಕ್ಕೆ ಸೀಮಿತವಾಗದೆ, ಪ್ರತಿದಿನದ ನಡೆ, ನುಡಿ ಹಾಗೂ ಆಚರಣೆಯಲ್ಲಿ ಅವರ ಆದರ್ಶಗಳನ್ನು ಪಾಲಿಸುವ ಮೂಲಕ ಗೌರವ ಸಲ್ಲಿಸಬೇಕು. ಅವರ ತ್ಯಾಗ ಹಾಗೂ ದೇಶಪ್ರೇಮ ಮುಂದಿನ ಪೀಳಿಗೆಗೂ ಪ್ರೇರಣೆಯಾಗಬೇಕು ಎಂದು ಎ.ಎಸ್.ಪೊನ್ನಣ್ಣ ಅವರು ನುಡಿದರು.
ನಂತರ ಗುಡ್ಡೆಮನೆ ಅಪ್ಪಯ್ಯ ಗೌಡರ ಸ್ಮಾರಕದ ಬಳಿಯಿಂದ ಮೆರವಣಿಗೆ ಹೊರಟು ಜನರಲ್ ತಿಮ್ಮಯ್ಯ ವೃತ್ತ, ಮಂಗೇರಿರ ಮುತ್ತಣ್ಣ ವೃತ್ತದ ಮೂಲಕ ಕೋಟೆಗೆ ಆಗಮಿಸಿ, ಅಪ್ಪಯ್ಯ ಗೌಡರನ್ನು ಗಲ್ಲಿಗೇರಿಸಿದ ಸ್ಥಳದಲ್ಲಿ ಗಣ್ಯರು ಪುಷ್ಪಗುಚ್ಛ ಸಮರ್ಪಿಸಿ ಗೌರವ ನಮನ ಸಲ್ಲಿಸಿದರು.
ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಕೆ.ಸಿ.ದಯಾನಂದ ಅವರು ಮಾತನಾಡಿ, ಗುಡ್ಡೆಮನೆ ಅಪ್ಪಯ್ಯ ಗೌಡರ ಸಂಸ್ಮರಣೆ ಮಾಡುವುದು ಶ್ಲಾಘನೀಯ ಕಾರ್ಯ, ವೀರ ಪುರುಷರನ್ನು ಮರೆತರೆ ಸಮಾಜ ತನ್ನ ಅಸ್ಮಿತೆ ಕಳೆದುಕೊಳ್ಳುತ್ತದೆ ಎಂದು ಹೇಳಿದರು.
ಸಿಪಾಯಿ ದಂಗೆಗೂ ಮೊದಲೇ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರರಲ್ಲಿ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರು ಪ್ರಮುಖರಾಗಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.
ಅಪ್ಪಯ್ಯ ಗೌಡರ ಹೆಸರನ್ನು ಕೇವಲ ರಸ್ತೆಗೆ ಮಾತ್ರವಲ್ಲದೆ, ಶಿಕ್ಷಣ ಸಂಸ್ಥೆಗಳಿಗೂ ನಾಮಕರಣ ಮಾಡಬೇಕು. ಜಿಲ್ಲೆಯಲ್ಲಿರುವ ಮಿಲಿಟರಿ ಶಾಲೆಗೆ ಅವರ ಹೆಸರಿಡುವಂತಾಗಬೇಕು. ಕೊಡಗು ವಿಶ್ವವಿದ್ಯಾಲಯದಲ್ಲಿ ಗುಡ್ಡೆಮನೆ ಅಪ್ಪಯ್ಯ ಗೌಡರ ಅಧ್ಯಯನ ಪೀಠ ಸ್ಥಾಪಿಸಬೇಕು. ಅಕಾಡೆಮಿ ವತಿಯಿಂದ ಅವರ ಕುರಿತು ವಿಶೇಷ ಸಂಶೋಧನೆ ನಡೆಸಿ, ಜೀವನ, ಹೋರಾಟ ಹಾಗೂ ಸಾಧನೆಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಆಶಯ ವ್ಯಕ್ತಪಡಿಸಿದರು.’
ಮಂಗಳೂರು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷರು ಹಾಗೂ ಸಮರವೀರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕಿರಣ್ ಬುಡ್ಲೆಗುತ್ತು ಅವರು ಮಾತನಾಡಿ, ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರರ ಕುರಿತು ಇಂದಿನ ಪೀಳಿಗೆಗೆ ಅರಿವು ಮೂಡಿಸುವ ಅಗತ್ಯವಿದೆ. ಅವರ ತ್ಯಾಗ ಮತ್ತು ಬಲಿದಾನದ ಬಗ್ಗೆ ಯುವಜನರಿಗೆ ತಿಳಿಸಬೇಕು ಎಂದು ಹೇಳಿದರು.
ಕೆದಂಬಾಡಿ ರಾಮಯ್ಯಗೌಡ ಹಾಗೂ ಗುಡ್ಡೆಮನೆ ಅಪ್ಪಯ್ಯ ಗೌಡರ ಸ್ವಾತಂತ್ರ್ಯ ಹೋರಾಟದ ಕುರಿತು ಜನರಿಗೆ ತಿಳಿಸುವ ಕಾರ್ಯವಾಗಬೇಕು. ಅವರನ್ನು ಕೇವಲ ಒಂದು ಸಮುದಾಯದ ವ್ಯಕ್ತಿಗಳಾಗಿ ಗುರುತಿಸುವ ಬದಲು, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾನ್ ವೀರರಾಗಿ ಗುರುತಿಸಬೇಕು. ಪ್ರತಿಯೊಬ್ಬರಲ್ಲೂ ದೇಶಾಭಿಮಾನ ಬೆಳೆಸುವ ಕಾರ್ಯವಾಗಬೇಕು ಎಂದು ಅಭಿಪ್ರಾಯಪಟ್ಟರು.
ಇದೇ ಸಂದರ್ಭದಲ್ಲಿ ಮಡಿಕೇರಿ ಬಸ್ ನಿಲ್ದಾಣಕ್ಕೆ ಗುಡ್ಡೆಮನೆ ಅಪ್ಪಯ್ಯ ಗೌಡರ ಹೆಸರನ್ನು ನಾಮಕರಣ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಎಂ.ಜಿ.ಮೋಹನ್ ದಾಸ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಹಿರಿಯರಾದ ಅಂಬೆಕಲ್ಲು ಕುಶಾಲಪ್ಪ, ಕಾರ್ಯಕ್ರಮ ಸಂಚಾಲಕರಾದ ಪಿ.ಎಂ.ಸಂದೀಪ್, ಮೋಹನ್ ಪೊನ್ನಚ್ಚನ, ಅಕಾಡೆಮಿ ಸದಸ್ಯರಾದ ಸೂದನ ಈರಪ್ಪ, ಡಾ.ಎನ್.ಎ.ಜ್ಞಾನೇಶ್, ಲೋಕೇಶ್ ಊರುಬೈಲು, ವಿನೋದ್ ಮೂಡಗದ್ದೆ, ಲತಾ ಪ್ರಸಾದ್ ಕುದ್ಪಾಜೆ, ಪಿ.ಎಸ್.ಕಾರ್ಯಪ್ಪ, ಗೋಪಾಲ ಪೆರಾಜೆ, ಇತರರು ಇದ್ದರು.
ಪುಷ್ಪಾರ್ಚನೆ ಸಂದರ್ಭದಲ್ಲಿ ರೇವತಿ ರಮೇಶ್ ಮತ್ತು ತಂಡದವರು ಗುಡ್ಡೆಮನೆ ಅಪ್ಪಯ್ಯ ಗೌಡರ ಕುರಿತು ನಮನ ಗೀತೆ ಹಾಡಿದರು. ಪರ್ಲಕೋಟಿ ಸೋನ ಪ್ರೀತು ಮತ್ತು ತಂಡದವರು ನಮನ ಗೀತೆ ಹಾಡಿದರು. ಕುಶಾಲನಗರ ಮತ್ತು ಮಕ್ಕಂದೂರು ಮಹಿಳಾ ಒಕ್ಕೂಟದವರು ಅಪ್ಪಯ್ಯ ಗೌಡರ ಕುರಿತು ಹಾಡು ಹಾಡಿದರು. ಚೊಕ್ಕಾಡಿ ಪ್ರೇಮ ರಾಘವಯ್ಯ ತಂಡದವರು ಅಪ್ಪಯ್ಯ ಗೌಡರ ಜೀವನ ಚರಿತ್ರೆ ಕುರಿತು ಲಾವಣಿ ಗೀತೆ ಹಾಡಿದರು. ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದಿಂದ ಆಶಯ ಗೀತೆ ಹಾಡಿದರು. ಅಕಾಡೆಮಿ ಸದಸ್ಯರಾದ ವಿನೋದ್ ಮೂಡಗದ್ದೆ ನಿರೂಪಿಸಿ, ಸ್ವಾಗತಿಸಿದರು. ಪೊನ್ನಚ್ಚನ ಮೋಹನ ವಂದಿಸಿದರು.












