ಇತ್ತೀಚಿನ ಸುದ್ದಿ
ಮಣಿಪಾಲ: ವಸತಿ ಯೋಜನೆಗೆ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ನಿಧಿ ಬಳಸಲು ವಿರೋಧಿಸಿ ಕಟ್ಟಡ ಕಾರ್ಮಿಕರಿಂದ ಪ್ರತಿಭಟನೆ
22/09/2022, 21:38

ಉಡುಪಿ(reporterkarnataka.com):
ವಸತಿ ಯೋಜನೆಗೆ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ನಿಧಿ ಬಳಸಲು ಮುಂದಾಗಿರುವುದನ್ನು ಖಂಡಿಸಿ ಹಾಗೂ ಕಡಿಮೆ ದರದಲ್ಲಿ ಮರಳು ಪೊರೈಕೆಗೆ ಆಗ್ರಹಿಸಿ ಉಡುಪಿ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಕಟ್ಟಡ ಕಾರ್ಮಿಕರು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಎದುರು ಇಂದು ಪ್ರತಿಭಟನೆ ನಡೆಸಿದರು.
ಕೊಳಚೆ ನಿರ್ಮೂಲನೆ ಮಂಡಳಿ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಸತಿ ಯೋಜನೆಯಡಿಯಲ್ಲಿ ಫಲಾನುಭವಿಗಳಾಗಿ ಆಯ್ಕೆಯಾದ ಎಲ್ಲರಿಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನಕಲಿ ಕಾರ್ಮಿಕರನ್ನು ನೋಂದಾಯಿಸಿ ಇದರ ಲಾಭ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಇದರ ಬಗ್ಗೆ ಸೂಕ್ತ ತನಿಖೆ ನಡೆಸಿ ಕ್ರಮಕೈಗೊಳ್ಳಬೇಕು. ನೈಜ ಕಾರ್ಮಿಕರಿಗೆ ಸೌಲಭ್ಯ ಸಿಗುವಂತಾಗಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಕಟ್ಟಡ ಕಾರ್ಮಿಕರಲ್ಲದವರು ನಕಲಿ ದಾಖಲೆ ಮೂಲಕ ನೋಂದಣಿಯಾಗಿರುವವರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಬೇಕು. ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ಬಸ್ ಗಳ ಸಂಖ್ಯೆ ಕಡಿಮೆ ಇರುವುದರಿಂದ ಕಾರ್ಮಿಕರಿಗೆ ಬಸ್ ಪಾಸ್ ಬದಲು ನಗದು ನೀಡುವ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.
ಸಂಘದ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ, ಅಧ್ಯಕ್ಷ ಶೇಖರ್ ಬಂಗೇರ, ಶಶಿಧರ್ ಗೊಲ್ಲ ಹಾಗೂ ಕಟ್ಟಡ ಕಾರ್ಮಿಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.