ಇತ್ತೀಚಿನ ಸುದ್ದಿ
ಭದ್ರಾಕ್ಕೆ ಕಾಡಾನೆ ಓಡಿಸಿದ್ದು ಸಚಿವ ರಾಮಲಿಂಗಾರೆಡ್ಡಿ: ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅಳಲು
24/11/2026, 12:10
ಬೆಂಗಳೂರು(reporterkarnataka.com):ಶಾಸಕಿ ನಯನಾ ಮೋಟಮ್ಮ ಅವರ ರಾಜೀನಾಮೆಗೂ ನನಗೂ ಯಾವುದೇ ಸಂಬಂಧವಿಲ್ಲ. ಕಾಡಾನೆಗಳನ್ನು ಭದ್ರಾ ಅಭಯಾರಣ್ಯಕ್ಕೆ ಸ್ಥಳಾಂತರಿಸಲು ಆದೇಶ ನೀಡಿರುವುದು ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಅವರೇ ಹೊರತು, ನಾನಲ್ಲ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಸ್ಪಷ್ಟಪಡಿಸಿದರು. ವಿಕಾಸಸೌಧದಲ್ಲಿ ಮಾತನಾಡಿದ ಅವರು, ರಾಜೀನಾಮೆ ನೀಡುವುದು ಬಿಡುವುದು ನಯನಾ ಮೋಟಮ್ಮ ಅವರ ವೈಯಕ್ತಿಕ ನಿರ್ಧಾರ. ಅವರ ರಾಜೀನಾಮೆ ಪ್ರಶ್ನಿಸಲು ನನಗೇನು ಅಧಿಕಾರವಿದೆ? ಅದಕ್ಕೂ ನನಗೂ ಸಂಬಂಧವಿಲ್ಲ ಎಂದು ಪ್ರಶ್ನಿಸಿದರು.
ಬೇಲೂರಿನಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಾಗ ಜನರು ಶವಗಳನ್ನು ಇಟ್ಟು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಬಿಜೆಪಿ ಶಾಸಕರು ಆನೆಗಳನ್ನು ಸ್ಥಳಾಂತರಿಸುವಂತೆ ಒತ್ತಾಯಿಸಿದ್ದರು. ರೈತರ ಜಮೀನುಗಳಿಗೆ ನುಗ್ಗಿ ಅನಾಹುತ ಸೃಷ್ಟಿಸುತ್ತಿರುವ ಆನೆಗಳನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಅವರು 1.24 ಲಕ್ಷ ಎಕರೆ ವಿಸ್ತೀರ್ಣದ ಭದ್ರಾ ಅಭಯಾರಣ್ಯಕ್ಕೆ ಆನೆಗಳನ್ನು ಸ್ಥಳಾಂತರಿಸಲು ಆದೇಶಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವನಾಗಿ ಆದೇಶವನ್ನು ಜನರ ಮುಂದೆ ಓದಿದ್ದೆ. ಒಂದು ತಿಂಗಳ ಕಾಲಾವಕಾಶ ನೀಡುವಂತೆ ಅರಣ್ಯಾಧಿಕಾರಿಗಳು ಮನವಿ ಮಾಡಿದ್ದರು. ಅದರಂತೆ ಕಾರ್ಯಾಚರಣೆ ಆರಂಭವಾಗಿದೆ ಎಂದರು.
ನಯನಾ ಮೋಟಮ್ಮ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದು, ಆನೆಗಳು ಚಿಕ್ಕಮಗಳೂರು ಅಥವಾ ಮೂಡಿಗೆರೆ ಭಾಗದಲ್ಲೇ ಉಳಿದುಕೊಂಡರೆ ಎಂಬ ಆತಂಕವನ್ನು ನಿವಾರಿಸಿದ್ದೇನೆ. ಕಾರ್ಯಾಚರಣೆ ವೇಳೆ 15ರಿಂದ 20 ದಿನ ಸಮಸ್ಯೆಯಾಗಬಹುದು ಎಂದು ತಿಳಿಸಿದ್ದೇನೆ. ಮಾನವ-ಪ್ರಾಣಿ ಸಂಘರ್ಷಕ್ಕೆ ರಾಜಕಾರಣ ಬೆರೆಸದೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಚರ್ಚಿಸಿ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದರು.












