ಇತ್ತೀಚಿನ ಸುದ್ದಿ
ಮುಂದಿನ 5 ವರ್ಷದಲ್ಲಿ ಅನಿಮಿಯ ಮುಕ್ತ ಕರ್ನಾಟಕ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಣೆ
22/11/2023, 22:00
ಬೆಂಗಳೂರು(reporterkarnataka.com): ರಾಜ್ಯದಲ್ಲಿ ರಕ್ತಹೀನತೆ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಿದ್ದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಅನಿಮಿಯ ಮುಕ್ತ ಪೌಷ್ಠಿಕ ಕರ್ನಾಟಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಮಹಿಳೆ ಮತ್ತು ಮಕ್ಕಳ ಆರೋಗ್ಯ ರಕ್ಷಣೆಗೆ ಹೆಚ್ಚು ಒತ್ತು ನೀಡಲಾಗುತ್ತಿದ್ದು, ಈಗಾಗಲೇ ಅದಕ್ಕೆ ಪೂರಕವಾದಂತಹ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ರಕ್ತ ಹೀನತೆ ಮಹಿಳೆ ಮತ್ತು ಮಕ್ಕಳನ್ನು ಕಾಡುತ್ತಿರವ ಬಹುದೊಡ್ಡ ಸಮಸ್ಯೆಯಾಗಿದ್ದು, ಇದರ ನಿವಾರಣೆಗಾಗಿ ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸುವುದರ ಜೊತೆಗೆ ಯೋಜನೆಯ ಯಶಸ್ಸಿಗೆ ಪರಿಣಾಮಕಾರಿಯಾಗಿ ಕೆಲಸ ಮಾಡಲಿದ್ದೇವೆ ಎಂದು ಸಚಿವರು ತಿಳಿಸಿದರು.
ಈ ಮೂಲಕ ಮುಂದಿನ ಐದು ವರ್ಷದಲ್ಲಿ ರಾಜ್ಯವನ್ನು ಅನಿಮಿಯ ಮುಕ್ತವಾಗಿಸಲು ಶ್ರಮಿಸುತ್ತೇವೆ ಎಂದರು. ಮಹಿಳೆಯರಿಗೆ ಆಹಾರದ ಬಗ್ಗೆ ಅರಿವು ಮೂಡಿಸುವ ಅಗತ್ಯವಿದೆ. ಸಿರಿ ಧಾನ್ಯಗಳ ಬಳಕೆ ಹಾಗೂ ಅದರ ಉಪಯೋಗದ ಬಗ್ಗೆಯೂ ತಿಳಿಸಬೇಕಿದೆ. ಈ ನಿಟ್ಟಿನಲ್ಲಿ ಇದೊಂದು ಮಹತ್ವಪೂರ್ಣ ಯೋಜನೆಯಾಗಿದೆ ಎಂದು ಸಚಿವರು ಹೇಳಿದರು.
ರಾಜ್ಯದಲ್ಲಿ ಅನೀಮಿಯಾ ಕಡಿಮೆ ಮಾಡುವುದರ ಮೂಲಕ ತಾಯಂದಿರು ಮತ್ತು ಮಕ್ಕಳ ಪೌಷ್ಟಿಕಾಂಶದ ಸ್ಥಿತಿಯನ್ನು ಸುಧಾರಣೆ ಮಾಡಬೇಕಾಗಿರುವುದು ನಮ್ಮೆಲ್ಲರ ಹೊಣೆಯಾಗಿದೆ. ಈ ಕಾರ್ಯಕ್ರಮವು, ರಾಜ್ಯದಲ್ಲಿ ಪೌಷ್ಠಿಕಾಂಶದ ಸ್ಥಿತಿಯನ್ನು ಸುಧಾರಿಸಲು ಅಸ್ತಿತ್ವದಲ್ಲಿರುವ ಕಾರ್ಯಕ್ರಮಗಳನ್ನು ಒಟ್ಟುಗೂಡಿಸಲಿದೆ ಎಂದು ಸಚಿವರು ಹೇಳಿದರು.
ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.