ಇತ್ತೀಚಿನ ಸುದ್ದಿ
ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ ಮಧು ಬಂಗಾರಪ್ಪ ಕರೆ
26/02/2026, 23:14
ಬೆಂಗಳೂರು(reporterkarnataka.com): ಪ್ರತಿಷ್ಠಿತ ಜವಾಹರಲಾಲ್ ನೆಹರು ತಾರಾಲಯದಲ್ಲಿ ಇಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ಸರ್ ಸಿ.ವಿ. ರಾಮನ್ ಅವರ ‘ರಾಮನ್ ಎಫೆಕ್ಟ್’ ಸಂಶೋಧನೆಯ ಸ್ಮರಣಾರ್ಥ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳು ಮತ್ತು ವಿಜ್ಞಾನ ಆಸಕ್ತರು ಪಾಲ್ಗೊಂಡಿದ್ದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಶ್ರೀ ಮಧು ಬಂಗಾರಪ್ಪ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ವಿದ್ಯಾರ್ಥಿಗಳಲ್ಲಿ ಸ್ಫೂರ್ತಿ ತುಂಬಿದರು.
ಭಾರತದ ಸಂವಿಧಾನದ 51(h) ವಿಧಿಯ ಆಶಯದಂತೆ ಪ್ರತಿಯೊಬ್ಬ ನಾಗರಿಕರಲ್ಲಿ, ವಿಶೇಷವಾಗಿ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಮತ್ತು ವೈಚಾರಿಕತೆಯನ್ನು ಬೆಳೆಸುವುದು ನಮ್ಮ ಮೂಲಭೂತ ಕರ್ತವ್ಯವಾಗಿದೆ ಎಂದು ಅವರು ಪ್ರತಿಪಾದಿಸಿದರು.
ಇಂದಿನ ಯುವ ಪೀಳಿಗೆ ಸೋಶಿಯಲ್ ಮೀಡಿಯಾ ಬಳಕೆಯಲ್ಲಿ ಎಚ್ಚರಿಕೆ ವಹಿಸಬೇಕು. ಸಾಮಾಜಿಕ ಜಾಲತಾಣಗಳು ನಮ್ಮನ್ನು ದಾರಿತಪ್ಪಿಸದಂತೆ ನೋಡಿಕೊಳ್ಳಬೇಕು ಮತ್ತು ಅಲ್ಲಿ ಸಿಗುವ ಮಾಹಿತಿ ಸತ್ಯವೇ ಅಥವಾ ಸುಳ್ಳೇ ಎಂದು ವೈಜ್ಞಾನಿಕ ದೃಷ್ಟಿಕೋನದಿಂದ ವಿಶ್ಲೇಷಿಸಬೇಕು ಎಂದು ಕಿವಿಮಾತು ಹೇಳಿದರು.
ವಿದ್ಯಾರ್ಥಿಗಳು ಕೇವಲ ಪಠ್ಯಕ್ಕೆ ಸೀಮಿತವಾಗದೆ ಇನೋವೇಟಿವ್ (Innovative) ಸಿಸ್ಟಮ್‌ಗಳ ಕಡೆಗೆ ಗಮನ ಹರಿಸಬೇಕು. “ಆಕಾಶವೇ ಎಲ್ಲೆ” (Sky is the limit) ಎಂಬಂತೆ ನಿರಂತರ ಸಂಶೋಧನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.














ರಾಜ್ಯದ ಸರ್ಕಾರಿ ಶಾಲೆಗಳ ಹಾಗೂ ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಆಧುನಿಕ ತಂತ್ರಜ್ಞಾನ ಮತ್ತು ವಿಜ್ಞಾನದ ಅರಿವು ಮೂಡಿಸಲು ಶಾಲಾ ಶಿಕ್ಷಣ ಇಲಾಖೆಯು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯೊಂದಿಗೆ ಸದಾ ಕೈಜೋಡಿಸಲಿದೆ ಎಂದು ಭರವಸೆ ನೀಡಿದರು.
ವಿಜ್ಞಾನ ದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಮನೋಭಾವ ಮತ್ತು ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಕುರಿತು ಈ ಕುರಿತು ಪ್ರತಿಜ್ಞಾ ವಿಧಿಯನ್ನು ಬೋಧಿಸಿಲಾಯಿತು. ಇದು ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಬಗ್ಗೆ ಕುತೂಹಲ ಮತ್ತು ಜವಾಬ್ದಾರಿಯನ್ನು ಹೆಚ್ಚಿಸಲು ಪೂರಕವಾಯಿತು.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್. ಎಸ್. ಬೋಸರಾಜು, ಉನ್ನತ ಶಿಕ್ಷಣ ಸಚಿವರಾದ ಡಾ. ಎಂ. ಸಿ. ಸುಧಾಕರ್, ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಮತ್ತು ಐಟಿ-ಬಿಟಿ ಸಚಿವರಾದ ಪ್ರಿಯಾಂಕ್ ಖರ್ಗೆ, ಇಸ್ರೋದ ವಿಕ್ರಮ್ ಸಾರಾಭಾಯ್ ಪ್ರೊಫೆಸರ್ ಹಾಗೂ ಬಾಹ್ಯಾಕಾಶ ಆಯೋಗದ ಸದಸ್ಯರಾದ ಶ್ರೀ ಎ. ಎಸ್. ಕಿರಣ್ ಕುಮಾರ್, ಐಟಿ-ಬಿಟಿ ಮತ್ತು ವಿಜ್ಞಾನ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿಗಳಾದ ಡಾ. ಮಂಜುಳಾ ಎನ್, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ನಿರ್ದೇಶಕರಾದ ಸದಾಶಿವ ಪ್ರಭು ಬಿ., ಜವಾಹರಲಾಲ್ ನೆಹರು ತಾರಾಲಯದ ನಿರ್ದೇಶಕರಾದ ಡಾ. ಬಿ. ಆರ್. ಗುರುಪ್ರಸಾದ್ ಹಾಗೂ ಹಿರಿಯ ಅಧಿಕಾರಿಗಳು, ವಿಜ್ಞಾನಿಗಳು ಮತ್ತು ವಿವಿಧ ಶಾಲೆಯ ವಿದ್ಯಾರ್ಥಿಗಳು ವಿಜ್ಞಾನ ದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದರು.













