ಇತ್ತೀಚಿನ ಸುದ್ದಿ
ನೆರೆಹಾವಳಿ ಹಾನಿ ತಪ್ಪಿಸಲು ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಿ: ಮುಖ್ಯಮಂತ್ರಿ ಯಡಿಯೂರಪ್ಪ
20/06/2021, 07:45

ಮಂಗಳೂರು(reporterkarnataka news): ಮಳೆಯಿಂದ ಉಂಟಾಗುವ ನೆರೆ, ಪ್ರವಾಹ ಸಮಯದಲ್ಲಿ ಅನಾಹುತದಿಂದ ಸಾವು ನೋವು ಉಂಟಾಗದಂತೆ ಜಿಲ್ಲಾಡಳಿತ ನೋಡಿಕೊಳ್ಳಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೂಚನೆ ನೀಡಿದರು.
ಅವರು ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಪೋಲಿಸ್ ವರಿಷ್ಠಾಧಿಕಾರಿಗಳು ಸೇರಿದಂತೆ ಮತ್ತಿತರ ಅಧಿಕಾರಿಗಳೊಂದಿಗೆ ವಿಪತ್ತು ನಿರ್ವಹಣೆ ಕಾರ್ಯಗಳನ್ನು ಕೈಗೊಳ್ಳುವ ಕುರಿತು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಮಾತನಾಡುತ್ತಿದ್ದರು.
ರಾಜ್ಯದ ಕೆಲವು ಜಿಲ್ಲೆಗಳು ಕಳೆದ ಮೂರು ವರ್ಷಗಳಿಂದ ಒಂದಲ್ಲ ಒಂದು ರೀತಿಯಲ್ಲಿ ಪ್ರವಾಹ ಹಾಗೂ ಭೂಕುಸಿತ ಉಂಟಾಗಿ, ಸಂಕಷ್ಟ ಎದುರಿಸುತ್ತಿದ್ದೇವೆ. ಆದ್ದರಿಂದ ಇಂತಹ ಹಾನಿಯನ್ನು ತಡೆಯಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಅವರು ಸೂಚಿಸಿದರು.
ಈಗಾಗಲೇ ನಾಲ್ಕು ಜಿಲ್ಲೆಗಳಿಗೆ ಎನ್‍ಡಿಆರ್‍ಎಫ್ ತಂಡಗಳನ್ನು ಕಳುಹಿಸಲಾಗಿದೆ. ಪ್ರಾಕೃತಿಕ ವಿಕೋಪ ಎದುರಿಸಲು ಎಲ್ಲಾ ರೀತಿಯ ಸನ್ನದ್ದು ಮಾಡಿಕೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಿರ್ದೇಶನ ನೀಡಿದರು.
ಅಗತ್ಯವಿರುವೆಡೆ ಪರಿಹಾರ ಕೇಂದ್ರಗಳನ್ನು ತೆರೆದು ಸ್ಥಳಾಂತರಿಸುವುದು, ವೈದ್ಯಕೀಯ ಸವಲತ್ತು ಕಲ್ಪಿಸುವುದು, ಸಂಪನ್ಮೂಲಗಳನ್ನು ಕ್ರೋಢೀಕರಣ ಮಾಡಿಕೊಳ್ಳುವುದು ಮತ್ತಿತರ ಅಗತ್ಯ ತಯಾರಿ ಇರಬೇಕು. ಯಾವುದೇ ರೀತಿಯ ಹಾನಿ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸುವುದು ಅತ್ಯಂತ ಅಗತ್ಯ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ ಜಿಲ್ಲೆಯಲ್ಲಿ ಈಗಾಗಲೇ ವಿಪತ್ತು ಕಾರ್ಯಗಳನ್ನು ಕೈಗೊಳ್ಳಲು ತಂಡಗಳು ಹಾಗೂ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡುವುದರ ಜೊತೆಗೆ ಪೂರ್ವಭಾವಿ ಸಭೆಗಳನ್ನು ಮಾಡಿ ಅವರುಗಳಿಗೆ ಮಾರ್ಗದರ್ಶನ ನೀಡಲಾಗಿದೆ ಎಂದರು.
ನೆರೆಯಿಂದ ಜಿಲ್ಲೆಯ ಸಸಿಹಿತ್ಲು ಉಳ್ಳಾಲ ಸೋಮೇಶ್ವರ ಸೇರಿದಂತೆ ಮತ್ತಿತರ ಪ್ರದೇಶಗಳಲ್ಲಿ ಕಡಲಕೊರೆತೆ ಉಂಟಾಗಿದೆ ಎಂದ ಅವರು ಕಡಲಕೊರೆತ ನಿವಾರಣೆಗೆ ತಡೆಗೋಡೆಗಳನ್ನು ನಿರ್ಮಾಣ ಮಾಡುವ ಕಾರ್ಯಗಳು ಕೈಗೊಳ್ಳಬೇಕಿದೆ ಎಂದು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.
ಕಳೆದ ತಿಂಗಳು ಕಂದಾಯ ಸಚಿವರು ನೆರೆ ವೀಕ್ಷಣೆಗೆ ಬಂದ ಸಂದರ್ಭದಲ್ಲಿ ಇವುಗಳ ಸ್ಥಳ ಭೇಟಿ ಮಾಡಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ತಿಳಿಸಿದ್ದಾರೆ ಎಂದರು.