ಇತ್ತೀಚಿನ ಸುದ್ದಿ
ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಪರಾರಿ?: ಎಸ್ ಐಟಿ ತನಿಖೆ ಆದೇಶ ನಾಳೆ ಸಾಧ್ಯತೆ
28/04/2024, 20:24
ಬೆಂಗಳೂರು(reporterkarnataka.com): ಹಾಸನದ ಜೆಡಿಎಸ್ ಸಂಸದ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ(ಎಸ್ ಐಟಿ) ರಚಿಸಲು ರಾಜ್ಯ ಸರಕಾರ ಚಿಂತನೆ ನಡೆಸುತ್ತಿದ್ದಂತೆ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಪರಾರಿಯಾಗಿದ್ದಾರೆ.
ಪ್ರಕರಣದ ಕುರಿತು ನಾಳೆ ಎಸ್ ಐಟಿ ತನಿಖೆ ಬಗ್ಗೆ ಸರಕಾರದಿಂದ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆಯಿದ್ದು, ಬಂಧನದ ಭೀತಿಯಿಂದ ತಪ್ಪಿಸಿಕೊಳ್ಳಲು ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಪರಾರಿಯಾಗಿದ್ದಾರೆ. ಭಾನುವಾರ ಮುಂಜಾನೆ 3 ಗಂಟೆಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಜ್ವಲ್ ರೇವಣ್ಣ ಅವರು ಜರ್ಮನಿಯ ಫ್ರಾಂಕ್ ಪರ್ಟ್ ಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.
ಹಾಸನ ಜಿಲ್ಲೆಯಲ್ಲಿ ಪ್ರಜ್ವಲ್ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ತುಣುಕುಗಳು ಒಂದು ವಾರದಿಂದ ಹರಿದಾಡುತ್ತಿದ್ದು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಇದರಲ್ಲಿ
ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆ ನಡೆಸುವಂತೆ
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ್ ಹಾಗೂ
ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದರು.