ಇತ್ತೀಚಿನ ಸುದ್ದಿ
ರಾಜ್ಯದಲ್ಲಿ ಇಂದಿನಿಂದ 2 ದಿನ ಭಾರಿ ಮಳೆ ಮುನ್ಸೂಚನೆ: ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ
10/07/2022, 19:34
ಬೆಂಗಳೂರು(reporterkarnataka.com): ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಬಿರುಸಿನ ಮಳೆಯಾಗುತ್ತಿದ್ದು, ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಈ ನಡುವೆ ಇಂದಿನಿಂದ 2 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರಾವಳಿ ಭಾಗಗಳಲ್ಲಿ ಭಾರಿ ಮಳೆಯಾಗಲಿದೆ.ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಉತ್ತರ ಒಳನಾಡಿನ ಜಿಲ್ಲೆಗಳಲ್ಲಿಯೂ ಭಾರಿ ಮಳೆಯಾಗುವ ಹಿನ್ನೆಲೆ ಬೆಳಗಾವಿ, ಬೀದರ್, ಧಾರವಾಡ, ಹಾವೇರಿ ಕಲಬುರ್ಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳಭಾಗದಲ್ಲೂ ಅತಿಹೆಚ್ಚು ಮಳೆಯಾಗುವ ಮುನ್ಸೂಚನೆ ಹಿನ್ನೆಲೆ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಹಾಸನ ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯಲ್ಲಿ ನಿನ್ನೆ ಅತ್ಯಂತ ಭಾರಿ ಮಳೆಯಾಗಿದ್ದು, 19 ಸೆ.ಮೀ ಮಳೆಯಾಗಿದೆ. ಇನ್ನು ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ 15 ಸೆ.ಮೀ, ಇದೇ ಜಿಲ್ಲೆಯ ಕೋಟ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ತಲಾ 14 ಸೆ.ಮೀ. ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ, ಉಡುಪಿ ಜಿಲ್ಲೆಯ ಸಿದ್ದಾಪುರ, ಶಿವಮೊಗ್ಗ ಜಿಲ್ಲೆಯ ತುಮರಿಯಲ್ಲಿ ತಲಾ 13 ಸೆ.ಮೀ ಮಳೆಯಾಗಿದೆ.