ಇತ್ತೀಚಿನ ಸುದ್ದಿ
ರಾಜ್ಯದ 3 ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ: ನವೆಂಬರ್ 13ರಂದು ಮತದಾನ; 23ರಂದು ಫಲಿತಾಂಶ
15/10/2024, 22:03
ಹೊಸದಿಲ್ಲಿ(reporterkarnataka.com): ಕೇಂದ್ರ ಚುನಾವಣಾ ಆಯೋಗ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣಾ ದಿನಾಂಕ ಇಂದು ಘೋಷಿಸಿದ್ದು,ನವೆಂಬರ್ 13ರಂದು ಮತದಾನ ನಡೆಯಲಿದೆ.
ಬಳ್ಳಾರಿ ಜಿಲ್ಲೆಯ ಸಂಡೂರು,ಹಾವೇರಿ ಜಿಲ್ಲೆಯ ಶಿಗ್ಗಾಂವಿ ಹಾಗೂ ರಾಮನಗರ ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರಗಳಿಗೆ ನವೆಂಬರ್ 13ರಂದು ಮತದಾನ ನಡೆಯಲಿದೆ. ನ.23ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಆಯೋಗ ತಿಳಿಸಿದೆ.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ರಾಜೀನಾಮೆಯಿಂದ ಚನ್ನಪಟ್ಟಣ, ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಶಿಗ್ಗಾಂವಿ ಈ.ತುಕಾರಾಂ ರಾಜೀನಾಮೆಯಿಂದ ಸಂಡೂರು ವಿಧಾನಸಭಾ ಕ್ಷೇತ್ರ ತೆರವಾಗಿತ್ತು. ಈ ಮೂವರು ಸಂಸದರಾಗಿ ಆಯ್ಕೆಯಾದ ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಉಪಚುನಾವಣೆ ನಡೆಯುತ್ತಿದೆ.
ದೇಶಾದ್ಯಂತ ಒಟ್ಟು 47 ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣಾ ವೇಳಾಪಟ್ಟಿಯನ್ನೂ ಆಯೋಗ ಪ್ರಕಟಿಸಿದೆ.
ಅಕ್ಟೋಬರ್ 18ರಂದು ಚುನಾವಣೆಗೆ ಅಧಿಸೂಚನೆ ಪ್ರಕಟಿಸಲಾಗುತ್ತದೆ. ನಾಮಪತ್ರ ಸಲ್ಲಿಸಲು ಅಕ್ಟೋಬರ್ 25 ಕೊನೆಯ ದಿನ. ನಾಮಪತ್ರ ಹಿಂಪಡೆಯಲು ಕೊನೆಯ ದಿನ ಅಕ್ಟೋಬರ್ 30 ಎಂದು ಆಯೋಗ ತಿಳಿಸಿದೆ.