ಇತ್ತೀಚಿನ ಸುದ್ದಿ
ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ: ಪಾಂಡವರಕಲ್ಲಿನಲ್ಲಿ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ವಿಶ್ವಾಸ
22/01/2023, 20:25

ಬಂಟ್ವಾಳ(reporterkarnataka.com): ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮುಂದಿನ ಚುನಾವಣೆಯಲ್ಲಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ಮಾಡಲಾಗದ ಸಾಧನೆ ಬಿಜೆಪಿ ಮಾಡಿ ತೋರಿಸಿದೆ.ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಇಲ್ಲಿಗೆ ಸಮೀಪದ ಪಾಂಡವರ ಕಲ್ಲುವಿನಲ್ಲಿ ಸಮಾಪನಗೊಂಡ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ 8 ನೇ ದಿನದ ಪಾದಯಾತ್ರೆ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಾಶ್ಮೀರವನ್ನು ಭಾರತದ ಜತೆ ಜೋಡಿಸುವ ಕೆಲಸವನ್ನು ಪ್ರಧಾನಿ ಮೋದಿ ಮಾಡಿದ್ದಾರೆ. ಪ್ರಧಾನಿ ಮೋದಿ ಅವರು ಹೇಳಿದ್ದೆಲ್ಲವನ್ನು ಮಾಡಿ ತೋರಿಸಿದ್ದಾರೆ.ದೇಶದ ಯೋಧರಿಗೆ ಶಕ್ತಿ ತುಂಬುವ ಕೆಲಸವನ್ನು ಕೇಂದ್ರ ಸರಕಾರ ನಿರಂತರವಾಗಿ ಮಾಡಿದೆ. ದೇಶದ ಭದ್ರತೆ ವಿಚಾರದಲ್ಲಿ ಕಾಂಗ್ರೇಸ್ ನ ಚಿಂತನೆಗಳು ಭಯೋತ್ಪಾದಕರಿಗೆ ಪ್ರೇರಣೆ ನೀಡಿದೆ ಎಂದು ಟೀಕಿಸಿದರು.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮಾತನಾಡಿ, 2 ಸಾವಿರ ಕೋಟಿಗೂ ಹೆಚ್ಚು ಅನುದಾನವನ್ನು ಕ್ಷೇತ್ರಕ್ಕೆ ತರುವ ಮೂಲಕ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹೊಸ ಇತಿಹಾಸ ನಿರ್ಮಿಸಿದ್ದಾರೆ, ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ಕೃಷಿ ಹೀಗೆ ಎಲ್ಲಾ ಕ್ಷೇತ್ರಗಳ ಸುಧಾರಣೆಗೆ ಪೂರಕವಾಗಿ ಶಾಸಕ ರಾಜೇಶ್ ನಾಯ್ಕ್ ಶ್ರಮಿಸಿದ್ದಾರೆ ಎಂದರು.
ಶಾಸಕ ರಾಜೇಶ್ ನಾಯ್ಕ್ ಮಾತನಾಡಿ, ಕ್ಷೇತ್ರದ ಜನತೆ ಪ್ರೀತಿ ವಿಶ್ವಾಸಕ್ಕೆ ನಾನು ಋಣಿಯಾಗಿದ್ದೇನೆ, ಪಾದಯಾತ್ರೆಯಲ್ಲಿ ಸೇರಿಕೊಳ್ಳುವ ಹಿರಿಯರು, ಕಿರಿಯರು ನನ್ನ ಉತ್ಸಾಹ ಹೆಚ್ಚಿಸಿದ್ದಾರೆ ಎಂದು ನುಡಿದರು.
ಬಂಟ್ವಾಳ ಮಂಡಲ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಬಿಜೆಪಿ ಉಪಾಧ್ಯಕ್ಷ, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಒಳಚರಂಡಿ ಹಾಗೂ ಕುಡಿಯುವ ನೀರು ನಿಗಮದ ನಿರ್ದೇಶಕಿ ಸುಲೋಚನಾ ಭಟ್, ಗ್ರಾಮ ವಿಕಾಸ ಯಾತ್ರೆಯ ಸಂಚಾಲಕ ದೇವದಾಸ್ ಶೆಟ್ಟಿ, ಜಿ.ಪಂ.ಮಾಜಿ ಉಪಾಧ್ಯಕ್ಷ ತುಂಗಪ್ಪ ಬಂಗೇರ, ನಾವೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಚಿದಾನಂದ ರೈ ಕಕ್ಯ,ಉಳಿ ಗ್ರಾ.ಪಂ.ಅಧ್ಯಕ್ಷ ಸುರೇಶ್ ಮೈರ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕ್ಷೇತ್ರ ಬಿಜೆಪಿ ಕಾರ್ಯದರ್ಶಿ ಡೊಂಬಯ್ಯ ಅರಳ ಸ್ವಾಗತಿಸಿದರು. ಸಹ ಸಂಚಾಲಕ ಸುದರ್ಶನ ಬಜ ವಂದಿಸಿದರು. ದೇವದಾಸ್ ಕಜೆಕಾರು ಕಾರ್ಯಕ್ರಮ ನಿರ್ವಹಿಸಿದರು.