ಇತ್ತೀಚಿನ ಸುದ್ದಿ
ರಾಜ್ಯದಲ್ಲಿ ನೈತಿಕ ಪೊಲೀಸ್ ಗಿರಿ ಕೊನೆಗೊಳ್ಳಬೇಕು: ಖಾಕಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ
23/05/2023, 21:32
ಬೆಂಗಳೂರು(reporterkarnataka.com): ರಾಜ್ಯದಲ್ಲಿ ನೈತಿಕ ಪೊಲೀಸ್ ಗಿರಿಗೆ ಮಂಗಳ ಹಾಡಬೇಕು. ಕಾನೂನು ಸುವ್ಯವಸ್ಥೆಯ ವಿಷಯ ಬಂದಾಗ ಯಾವುದೇ ಧರ್ಮದ ಕುರಿತು ತಾರತಮ್ಯ ತೋರಿಸಬಾರದು. ಕಾನೂನು ಅಡಿಯಲ್ಲಿ ಎಲ್ಲರನ್ನು ಸಮಾನವಾಗಿ ಕಾಣಬೇಕೆಂದು ಪೊಲೀಸ್ ಇಲಾಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀತಿ ಪಾಠ ಬೋಧಿಸಿದರು.
ಮಂಗಳವಾರ ವಿಧಾನಸೌಧದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಸಭೆ ನಡೆಸಿದ ಅವರು, ಕಾನೂನು ಸುವ್ಯವಸ್ಥೆ ಹದಗೆಟ್ಟಿದರೆ ಹಿರಿಯ ಪೊಲೀಸ್ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು. ಸಮಾಜದ ಶಾಂತಿ, ಸಹಬಾಳ್ವೆಗೆ ಅಡ್ಡಿಪಡಿಸುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಿ ಎಂದರು.
ಪೊಲೀಸರಿಗೆ ಜನಸ್ನೇಹಿಯಾಗಲು ಕರೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರೌಡಿಸಂ, ಕಾನೂನು ಬಾಹಿರ ಚಟುವಟಿಕೆ, ಮಾದಕ ದ್ರವ್ಯ ವ್ಯವಹಾರ ನಡೆದರೆ ಪೊಲೀಸ್ ಇನ್ಸ್ ಪೆಕ್ಟರ್ ಮಾತ್ರವಲ್ಲದೆ ಡಿಸಿಪಿ ಅವರು ಕೂಡ ಇದರ ಹೊಣೆಗಾರಿಕೆಯನ್ನು ವಹಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಜನರು ಬದಲಾವಣೆ ಬಯಸಿ ಕಾಂಗ್ರೆಸ್ ಸರಕಾರವನ್ನು ಆಯ್ಕೆ ಮಾಡಿದ್ದಾರೆ. ಜನರ ಆಶೋತ್ತರದ ಬಗ್ಗೆ ಪೊಲೀಸ್ ಇಲಾಖೆ ಸ್ಪಂದಿಸಬೇಕು. ಸಮಾಜದಲ್ಲಿ ಶಾಂತಿಗೆ ಭಂಗ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅವರು ಹಿರಿಯ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.