ಇತ್ತೀಚಿನ ಸುದ್ದಿ
ಎಸ್ಸಿ, ಎಸ್ಟಿ ಮೀಸಲು ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ: ದಲಿತ ಸಂಘಟನೆಗಳ ಒಕ್ಕೂಟ ಖಂಡನೆ
18/07/2024, 21:00
ಮೋಹನ್ ನಂಜನಗೂಡು ಮೈಸೂರು
info.reporterkarnataka@gmail.com
ಪರಿಶಿಷ್ಟ ಜಾತಿ ಮತ್ತು ವರ್ಗಗಳ ವಿಶೇಷ ಅನುದಾನವನ್ನು ಸರ್ಕಾರ ತನ್ನ ಐದು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿರುವ ಸರ್ಕಾರದ ದಲಿತ ವಿರೋಧಿ ನೀತಿಯನ್ನು ರಾಜ್ಯ ದಲಿತ ಸಂಘಟನೆಗಳ ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ ಎಂದು ನಂಜನಗೂಡು ತಾಲೂಕು ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಗರ್ಲೆ ವಿಜಯಕುಮಾರ್ ಹಾಗೂ ಗೌರವ ಸಲಹೆಗಾರ ಚುಂಚನಹಳ್ಳಿ ಮಲ್ಲೇಶ್ ತಿಳಿಸಿದ್ದಾರೆ.
ಇಂದು ತಾಲೂಕು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು ಅವರು,ಹಿಂದೆಯಿದ್ದ ಬಿಜೆಪಿ ಸರ್ಕಾರದಲ್ಲಿ ಪರಿಶಿಷ್ಟ ಜಾತಿ ಮತ್ತು ವರ್ಗಗಳ ಅಭಿವೃದ್ಧಿಗೆ ಮೀಸಲಿಟ್ಟಿದ್ದ ಸಾವಿರಾರು ಕೋಟಿ ರೂಪಾಯಿಗಳ ವಿಶೇಷ ಅನುದಾನವನ್ನು ಸರಿಯಾಗಿ ಬಳಸದೆ ಬೇರೆ ಬೇರೆ ಯೋಜನೆಗಳಿಗೆ ಬಳಸಿ ದಲಿತ ವಿರೋಧಿ ನೀತಿಯನ್ನು ಅನುಸರಿಸಿತ್ತು. ಇದರಿಂದ ಬೇಸತ್ತ ಜನರು ಬಿಜೆಪಿಗೆ ತಕ್ಕ ಪಾಠ ಕಲಿಸಿದೆ. ಕಾಂಗ್ರೆಸ್ ಸರ್ಕಾರ ಬಂದರೆ ಇದಕ್ಕೆ ತಿಲಾಂಜಲಿ ಇಟ್ಟು ಪರಿಶಿಷ್ಟ ಜಾತಿ ಮತ್ತು ವರ್ಗಗಳ ಬದುಕು ಹಸನಾಗುತ್ತದೆ ಎಂದು ಕಾಂಗ್ರೆಸ್ ಗೆಲುವಿಗೆ ಹಗಲಿರುಳು ಶ್ರಮಿಸಿದ್ದೆವು.
ಆದರೆ ಈ ಸರ್ಕಾರವು ಕೂಡ ದಲಿತ ವಿರೋಧಿ ನೀತಿಯನ್ನು ಮುಂದುವರಿಸಿ ಪರಿಶಿಷ್ಟ ಜಾತಿ ಮತ್ತು ವರ್ಗಗಳ ಅಭಿವೃದ್ಧಿಗೆ ಮೀಸಲಿಟ್ಟಿದ್ದ ಹಣವನ್ನು ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡು ಪರಿಶಿಷ್ಟ ಜಾತಿ ಮತ್ತು ವರ್ಗದವರ ಕಣ್ಣಿಗೆ ಮಣ್ಣೆರಚುವ ಕೆಲಸಕ್ಕೆ ಮುಂದಾಗಿದೆ ಎಂದು ಸರ್ಕಾರದ ವಿರುದ್ಧ ಕಿಡಿ ಕಾರಿದರು.
ಅದಕ್ಕಾಗಿ ಅಧಿವೇಶನ ನಡೆಯುವ ಈ ಸಂದರ್ಭದಲ್ಲಿ ನಮ್ಮ ಸಂಘಟನೆ ವತಿಯಿಂದ ನಂಜನಗೂಡಿನಿಂದ ಬೆಂಗಳೂರಿಗೆ ತೆರಳಿ ಸಿಎಂ ಸಿದ್ದರಾಮಯ್ಯ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಮಹದೇವಪ್ಪ ನವರಿಗೆ ನಮ್ಮ ಸಂಘಟನೆ ವತಿಯಿಂದ ಮನವಿ ಸಲ್ಲಿಸಿ ಎಸ್ಇಪಿ ಮತ್ತು ಟಿಎಸ್ಪಿ ಯೋಜನೆಯ ಹಣವನ್ನು ಗ್ಯಾರಂಟಿ ಯೋಜನೆ ಗಳಿಗೆ ಬಳಸದೆ ನಮ್ಮ ಸಮುದಾಯಗಳ ಅಭಿವೃದ್ಧಿಗೆ ಬಳಸುವಂತೆ ಮನವಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.
ಅಲ್ಲದೆ ಪರಿಶಿಷ್ಟ ಜಾತಿ ಮತ್ತು ವರ್ಗಗಳಿಂದ ಆಯ್ಕೆಯಾಗಿರುವ ಮೀಸಲು ಕ್ಷೇತ್ರದ ಶಾಸಕರುಗಳು ತಮ್ಮ ಮೌನ ಮುರಿದು ಅಧಿವೇಶನದಲ್ಲಿ ಚರ್ಚಿಸುವ ಮೂಲಕ ಎಸ್ ಸಿ ಮತ್ತು ಎಸ್‌ಟಿ ಹಣ ದುರ್ಬಳಕೆ ಆಗದಂತೆ ನೋಡಿಕೊಳ್ಳಬೇಕು. ಇಲ್ಲದಿದ್ದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳುವುದರ ಜೊತೆಗೆ ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಗೋಷ್ಠಿಯಲ್ಲಿ ಗೌರವಾಧ್ಯಕ್ಷ ಕಾರ್ಯ ಬಸವಣ್ಣ, ಗೌರವ ಸಲಹೆಗಾರ ಮಲ್ಲಹಳ್ಳಿ ನಾರಾಯಣ, ಪ್ರಧಾನ ಕಾರ್ಯದರ್ಶಿ ಜಯಶಂಕರ್ , ಮುಖಂಡರಾದ ಸುರೇಶ್, ಶಂಕರಪುರ, ಅಭಿನಾಗಭೂಷಣ್ ಉಪಸ್ಥಿತರಿದ್ದರು.