ಇತ್ತೀಚಿನ ಸುದ್ದಿ
ಸೆಪ್ಟೆಂಬರ್ 14ರಿಂದ 16: ಬಂಟ್ಸ್ ಹಾಸ್ಟೆಲ್ ನಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ
09/09/2026, 13:26
ಮಂಗಳೂರು(reporterkarnataka.com): ಬಂಟರ ಯಾನೆ ನಾಡವರ ಮಾತೃ ಸಂಘ, ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಬಂಟರ ಸಂಘಗಳು ಮತ್ತು ಶ್ರೀ ಸಿದ್ಧಿ ವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಸೆಪ್ಟೆಂಬರ್ 14ರಿಂದ 16ರವರೆಗೆ ನಗರದ ‘ಓಂಕಾರ ನಗರ’ ಬಂಟ್ಸ್ ಹಾಸ್ಟೆಲ್ನಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಅತ್ಯಂತ ವಿಜೃಂಭಣೆಯಿಂದ ಜರುಗಲಿದೆ ಎಂದು ಶ್ರೀ ಸಿದ್ಧಿಮಿನಾಯಕ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ಅಜಿತ್ ಕುಮಾರ್ ರೈ ಮಾಲಾಡಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಸೆಪ್ಟೆಂಬರ್ 13ರಂದು ಸಾಯಂಕಾಲ ಶ್ರೀ ರಾಮದಾಸ್ ಆಚಾರ್ಯರ ಶಿಷ್ಯರಿಂದ ರಚಿಸಲ್ಪಟ್ಟ ಶ್ರೀ ಸಿದ್ಧಿಮಿನಾಯಕ ದೇವರ ವಿಗ್ರಹವನ್ನು ಬಂಟ್ಸ್ ಹಾಸ್ಟೆಲ್ನ ಓಂಕಾರ ನಗರಕ್ಕೆ ಭಕ್ತಿಪೂರ್ವಕವಾಗಿ ಬರಮಾಡಿಕೊಳ್ಳಲಾಗುವುದು. ಸೆಪ್ಟೆಂಬರ್ 14ರಂದು ಧ್ವಜಾರೋಹಣ, ಗಣೇಶೋತ್ಸವ ಕಾರ್ಯಕ್ರಮಗಳ ಉದ್ಘಾಟನೆ, ಧಾರ್ಮಿಕ ಸಭೆ, ಸಾಧಕರಿಗೆ ಸನ್ಮಾನ ಹಾಗೂ ವಿವಿಧ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮಗಳು ಜರುಗಲಿವೆ ಎಂದರು.
ಡಾ. ಆಶಾಜ್ಯೋತಿ ರೈ ಬಂಬ್ರಾಣ ಮಾತನಾಡಿ, ಸೆಪ್ಟೆಂಬರ್ 15ರಂದು ಮಹಾಗಣಯಾಗ, ಧಾರ್ಮಿಕ ಸಭೆ ಮತ್ತು ಸಂಗೀತ ಸಂಜೆ ಕಾರ್ಯಕ್ರಮಗಳು ನಡೆಯಲಿವೆ. ಸಮಾರೋಪ ಸಮಾರಂಭದ ದಿನವಾದ ಸೆಪ್ಟೆಂಬರ್ 16ರಂದು ಮಹಾ ಅನ್ನಸಂತರ್ಪಣೆ ಜರುಗಲಿದ್ದು, ಸಾಯಂಕಾಲ ಗಣ್ಯರ ಉಪಸ್ಥಿತಿಯಲ್ಲಿ ಶ್ರದ್ಧಾಭಕ್ತಿಯಿಂದ ಶ್ರೀ ಗಣೇಶ ಮೂರ್ತಿಯ ಶೋಭಾಯಾತ್ರೆ ನಡೆಸಿ ಮಹಾಮಾಯ ದೇವಾಸ್ಥಾನದ ಕೆರೆಯಲ್ಲಿ ವಿಸರ್ಜನೆ ನೆರವೇರಿಸಲಾಗುವುದು. ಈ ಎಲ್ಲಾ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ಪ್ರಸಾದ ಸ್ವೀಕರಿಸುವಂತೆ ಅವರು ವಿನಂತಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬಂಟರ ಯಾನೆ ನಾಡವರ ಮಾತೃಸಂಘದ ಉಪಾಧ್ಯಕ್ಷರು ಹೇಮನಾಥ ಶೆಟ್ಟಿ ಕಾವು, ಪ್ರಧಾನ ಕಾರ್ಯದರ್ಶಿ ಎಂ. ಕರುಣಾಕರ ಶೆಟ್ಟಿ, ಜೊತೆ ಕಾರ್ಯದರ್ಶಿ ಪದ್ಮನಾಭ ಶೆಟ್ಟಿ ಪುಂಜಮೆ, ಶ್ರೀ ಸಿದ್ಧಿಮಿನಾಯಕ ಪ್ರತಿಷ್ಠಾನದ ಟ್ರಸ್ಟಿ ರವಿರಾಜ್ ಶೆಟ್ಟಿ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರು ಜಯಶೀಲ ಅಧ್ಯಂತಾಯ, ಪ್ರಧಾನ ಕಾರ್ಯದರ್ಶಿ ಸದಾಶಿವ ಶೆಟ್ಟಿ ಬಿಜೈ ಉಪಸ್ಥಿತರಿದ್ದರು.












