ಇತ್ತೀಚಿನ ಸುದ್ದಿ
ಸಿದ್ದರಾಮಯ್ಯಗೆ ಮತ್ತೆ ಮುಖ್ಯಮಂತ್ರಿ ಸ್ಥಾನ?: ಡಿ.ಕೆ. ಶಿವಕುಮಾರ್ ಸಹಿತ 3 ಮಂದಿ ಡಿಸಿಎಂಗಳು?
14/05/2023, 21:38
ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಆಯ್ಕೆ ವಿಚಾರವನ್ನು ಪಕ್ಷದ ಹೈಕಮಾಂಡ್ ಗೆ ಬಿಡಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ಸಿದ್ದರಾಮಯ್ಯ ಅವರನ್ನು ಮತ್ತೊಮ್ಮೆ ಸಿಎಂ ಕುರ್ಚಿಯಲ್ಲಿ ಕೂರಿಸುವ ಎಲ್ಲ ಸಾಧ್ಯತೆಗಳಿವೆ.
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಭಾನುವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದ್ದು, ಮುಖ್ಯ ಮಂತ್ರಿ ಗಾದಿಗೆ ತೀವ್ರ ಪೈಪೋಟಿ ಏರ್ಪಟ್ಟ ಹಿನ್ನೆಲೆಯಲ್ಲಿ ಮುಖ್ಯ ಮಂತ್ರಿ ಆಯ್ಕೆ ವಿಷಯವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬಿಟ್ಟು ಕೊಡಲು ನಿರ್ಧರಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡುವೆ ತೀವ್ರ ಪೈಪೋಟಿ ನಡೆದಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಿದ್ದು ಮತ್ತು ಡಿಕೆಶಿ ನಡುವೆ ತೀವ್ರ ಪೈಪೋಟಿ ನಡೆದರೂ ಡಿಕೆಶಿ ಅವರಿಗೆ ಸಿಎಂ ಸ್ಥಾನ ಸಿಗಲಾರದು ಎಂಬ ಮಾಹಿತಿ ಇದೆ. ಡಿಕೆಶಿ ವಿರುದ್ಧ 5 ಪ್ರಕರಣಗಳು ವಿಚಾರಣೆಗೆ ಬಾಕಿ ಇದ್ದು, ಅವರನ್ನು ಸಿಎಂ ಮಾಡಿದರೆ, ಕೇಂದ್ರ ಸರಕಾರ ಎಲ್ಲಾದರು ಸೇಡಿನ ಕ್ರಮಕ್ಕೆ ಮುಂದಾದರೆ ಪಕ್ಷ ಪೇಚಿಗೆ ಸಿಲುಕಬೇಕಾಗುತ್ತದೆ ಎಂಬ ಕಾರಣಕ್ಕೆ ಡಿಕೆಶಿ ಅವರಿಗೆ ಹೈಕಮಾಂಡ್ ಮುಖ್ಯಮಂತ್ರಿ ಪದವಿ ನೀಡಲಾರದು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರಿಗೆ ಸಿಎಂ ಯೋಗ ಮತ್ತೆ ಕೂಡಿ ಬರಲಿದೆ. ಹಾಗೆ ಡಿಕೆಶಿ ಸಹಿತ 3 ಮಂದಿ ಡಿಸಿಎಂಗಳ ನೇಮಕದ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.