ಇತ್ತೀಚಿನ ಸುದ್ದಿ
ಶೌಚಾಲಯದಲ್ಲಿ ಮೊಬೈಲ್ ಚಿತ್ರೀಕರಣ; ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ: ಉಡುಪಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
26/07/2023, 18:10

ಬೆಂಗಳೂರು (reporterkarnataka.com): ಹಿಜಾಬ್ ಪ್ರಕರಣದಲ್ಲಿ ಸದ್ದು ಮಾಡಿದ್ದ ಉಡುಪಿ ಇದೀಗ ಶೌಚಾಲಯದಲ್ಲಿ ಮೊಬೈಲ್ ರೆಕಾರ್ಡಿಂಗ್ ಸಂಬಂಧಿಸಿದ್ದಂತೆ ವಿವಾದ ಎಬ್ಬಿಸಿದೆ. ಪ್ರಕರಣದ ಕುರಿತು ಪೊಲೀಸರು ಸುಮೋಟೊ ಪ್ರಕರಣ ದಾಖಲಿಸಿದ್ದಾರೆ. ಇದೀಗ ಜಿಲ್ಲೆಯ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ ನೀಡಿದ್ದಾರೆ. ಆರೋಪಿಗಳ ವಿರುದ್ಧ ಕಾನೂನಿನಡಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದಾಗಿ ಹೇಳಿದ್ದಾರೆ.
ಉಡುಪಿಯ ಖಾಸಗಿ ಕಾಲೇಜೊಂದರ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳ ವಿರುದ್ಧ ಕಾನೂನಿನಡಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವೆ ನುಡಿದಿದ್ದಾರೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆಯೂ ಆಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಈ ಬಗ್ಗೆ ಮಾತನಾಡಿ, ಪ್ರಕರಣ ಕುರಿತು ಮೂವರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಕಾನೂನಿನಡಿ ಕ್ರಮಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಕಾನೂನಿಗಿಂತ ಯಾರೂ ದೊಡ್ಡವರಲ್ಲ, ನನಗೆ ಮಾಹಿತಿ ಬಂದ ಪ್ರಕಾರ ಘಟನೆಗೆ ಸಂಬಂಧ ಪಟ್ಟಂತೆ ಯಾವುದೇ ವಿಡಿಯೋ ಕೂಡ ವೈರಲ್ ಆಗಿಲ್ಲ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.