ಇತ್ತೀಚಿನ ಸುದ್ದಿ
ಉಡುಪಿ ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
28/01/2024, 23:10
ಉಡುಪಿ(reporterkarnataka.com): ಉಡುಪಿ ಜಿಲ್ಲೆ ಪ್ರವಾಸೋದ್ಯಮಕ್ಕೆ ಯೋಗ್ಯವಾದ ಜಿಲ್ಲೆ. ಮುಂದಿನ ದಿನಗಳಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಹೇಳಿದರು. ಕುಂದಾಪುರದಲ್ಲಿ ಉದ್ಯಮಿ ಉದಯ್ ಕುಮಾರ್ ಶೆಟ್ಟಿ ಅವರ ‘ಯುವ ಮನೀಶ್’ ನೂತನ ಹೋಟೆಲ್‌ನ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, ಜಿಲ್ಲೆಯ ಅಭಿವೃದ್ಧಿಗೆ ಸರ್ವರೀತಿಯಿಂದಲೂ ಶ್ರಮಿಸಲಾಗುವುದು ಎಂದರು.
ಕರಾವಳಿ ಜನ ದೈವ ಭಕ್ತರು. ಅವರಿ ಸದಾ ದೇವರ ಆಶೀರ್ವಾದ ಇರುತ್ತದೆ. ಹೀಗಾಗಿಯೇ ಅವರು ದೇಶಾದ್ಯಂತ ಉದ್ಯಮಗಳನ್ನು ಸ್ಥಾಪಿಸಿದ್ದಾರೆ ಎಂದು ಹೇಳಿದರು.
ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆಯಾದ ಬಳಿಕ ಜಿಲ್ಲೆಯ ಬಹುತೇಕ ದೇವಸ್ಥಾನಗಳಿಗೆ ಭೇಟಿ ನೀಡಿರುವೆ. ಇದೊಂದು ಪವಿತ್ರವಾದ ಸ್ಥಳ ಎಂದು ಸಚಿವರು ಹೇಳಿದರು.
ಉಡುಪಿ-ಮಂಗಳೂರು-ಬೆಂಗಳೂರು ನಡುವೆ ಕಾರಿಡಾರ್ ರಸ್ತೆ ನಿರ್ಮಾಣಕ್ಕೆ ರೂಪುರೇಷೆ ಸಿದ್ಧಪಡಿಸಲಾಗುವುದು. ಇದರಿಂದ ಜಿಲ್ಲೆಯ ಹೋಟೆಲ್ ಉದ್ಯಮ ಹಾಗೂ ಪ್ರವಾಸೋದ್ಯಮಕ್ಕೂ ಹೆಚ್ಚು ಅನುಕೂಲವಾಗಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ಜಿಲ್ಲೆಯ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು. ಜೊತೆಗೆ ಉದ್ಯಮಿಗಳಿಗೆ ಹೆಚ್ಚು ಅವಕಾಶ ನೀಡಬೇಕು ಎಂದರು.
ಸಮಾರಂಭದಲ್ಲಿ ಘಟಪ್ರಭಾದ ಗುಬ್ಬಲಗುಡ್ಡ ಕೆಂಪಯ್ಯ ಸ್ವಾಮಿ ಮಠದ ಡಾ.ಮಲ್ಲಿಕಾರ್ಜುನ ಮಹಾಸ್ವಾಮಿಗಳು, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಅರಭಾವಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿ, ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಶೆಟ್ಟಿ ಗಂಟಿಹೊಳೆ, ಹಿಂದುಳಿದ ವರ್ಗ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ, ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.